ಶಿವಮೊಗ್ಗ,ಅ. 04(DaijiworldNews/AK): ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್ನಲ್ಲಿ ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಘೋಷಣೆ ಮಾಡಿದ್ದಾರೆ.
ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪಿಸಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದೆ. ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಸಂಭವಿಸುತ್ತಿದೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.
5 ಸಾವಿರ ಎಕರೆ ಪ್ರದೇಶದಲ್ಲಿ ಆನೆಗಳಿಗೆ ಇಷ್ಟವಾದ ಬಿದಿರು, ಹಲಸು, ಹುಲ್ಲು ಇತ್ಯಾದಿ ಬೆಳೆಸಲಾಗುವುದು. ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೆರೆ ಹಿಡಿದ ಆನೆಗಳನ್ನು ಇಲ್ಲಿ ತಂದು ಬಿಡಲಾಗುವುದು. ಇದರಿಂದ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಿನ ಹೊರಗೆ ಇರುವ ಆನೆಗಳಿಂದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಸಾಧ್ಯವಾಗುತ್ತದೆ ಎಂದರು.