ಬೆಂಗಳೂರು,ಅ.09(DaijiworldNews/AK): ಕಾಂಗ್ರೆಸ್ ನಾಯಕರು, ಸಚಿವರು ನಡೆಸುತ್ತಿರುವ ಪ್ರತ್ಯೇಕ ಸಭೆಗಳು, ಮುಖ್ಯಮಂತ್ರಿ ಬದಲಾವಣೆ ಹಾಗೂ ದಲಿತ ಮುಖ್ಯಮಂತ್ರಿ ಬೇಡಿಕೆ ಕುರಿತ ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕಠಿಣದ ಸೂಚನೆ ನೀಡಿದೆ ಎನ್ನಲಾಗಿದೆ.
ಆ ಬೆನ್ನಲ್ಲೆ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಗೆ ಬುಧವಾರ ಬೆಳಿಗ್ಗೆ ಭೇಟಿ ನೀಡಿದ ಶಿವಕುಮಾರ್ ಈ ಬಗ್ಗೆ ಒಂದು ತಾಸು ಸಮಾಲೋಚನೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿರುವ ನಡುವೆಯೇ ಕೆಲವು ಸಚಿವರು ಗೌಪ್ಯ ಸಭೆ ನಡೆಸಿರುವುದು, ಮುಖ್ಯಮಂತ್ರಿ ಬದಲಾವಣೆ ಕುರಿತ ಹೇಳಿಕೆಗಳನ್ನು ಗಮನಿಸಿದ ವರಿಷ್ಠರು ಈ ಸೂಚನೆ ನೀಡಿದ್ದಾರೆ.