ಹುಬ್ಬಳ್ಳಿ, ಅ.18(DaijiworldNews/AA): ಶಿಗ್ಗಾವಿ ಕ್ಷೇತ್ರದ ಹಲವೆಡೆ ಸಂಚರಿಸಿ ಅಭ್ಯರ್ಥಿ ಯಾರಾಗಬೇಕು ಎನ್ನುವ ಕುರಿತು ಅಭಿಪ್ರಾಯ ಸಂಗ್ರಹಿಸಲಾಗಿದೆ. ಅದರಲ್ಲಿ ಪಕ್ಷದ ಕಾರ್ಯಕರ್ತರು ಸೇರಿದಂತೆ ಜನಸಾಮಾನ್ಯರು, ಸಂಸದ ಬಸವರಾಜ ಬೊಮ್ಮಾಯಿ ಕುಟುಂಬಕ್ಕೆ ನೀಡಿದರೆ ಒಳಿತು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಮೂರು ಕ್ಷೇತ್ರಗಳಿಗೆ ಮುಂದಿನ ತಿಂಗಳು ಉಪಚುನಾವಣೆ ನಡೆಯಲಿದ್ದು, ಶಿಗ್ಗಾವಿ ಕ್ಷೇತ್ರದಿಂದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರವಾಗಿ ಎಲ್ಲ ನಾಯಕರು ಕೆಲಸ ಮಾಡಲಿದ್ದಾರೆ ಎಂದರು.
ಇದಲ್ಲದೇ, ಇನ್ನೂ 60 ಮಂದಿ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದ ಅಭಿಪ್ರಾಯವನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುವುದು. ಅಂತಿಮವಾಗಿ ವರಿಷ್ಠರು ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದನ್ನು ನಿರ್ಧರಿಸಲಿದ್ದಾರೆ ಎಂದು ಹೇಳಿದರು.