ಬೆಂಗಳೂರು, ಅ.20(DaijiworldNews/AA): ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರವಿಲ್ಲ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಷಯದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿಗಣತಿ ನಡೆಸುವ ಅಧಿಕಾರವಿದೆ. ಸರ್ಕಾರ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡ ಬಳಿಕ ಮುಖ್ಯಮಂತ್ರಿ ಅವರು ಜಾತಿಗಣತಿಯ ಬಗ್ಗೆ ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂದು ಹೇಳಿದ್ದಾರೆ.
ಜಾತಿ ಗಣತಿ ಜಾರಿಗೊಳಿಸುವ ಮೊದಲು ಅದರ ಸಂಪೂರ್ಣ ಮಾಹಿತಿಯನ್ನು ಸರ್ಕಾರ ಬಹಿರಂಗಗೊಳಿಸಬೇಕು. ಜನರ ಅಭಿಪ್ರಾಯ ಸಂಗ್ರಹಿಸಿ ಬಳಿಕ ಅದನ್ನು ಜಾರಿಗೊಳಿಸುವುದು ಸೂಕ್ತ ಎಂದರು.
ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಕಳೆದುಕೊಳ್ಳುವ ಭಯದಿಂದ ಜಾತಿ ಗಣತಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಮೊದಲು ಅದನ್ನು ಬಹಿರಂಗ ಪಡೆಸಲಿ. ಸಾರ್ವಜನಿಕ ಚರ್ಚೆಯಾಗಲಿ ಎಂದು ಅಭಿಪ್ರಾಯ ಪಟ್ಟಿದ್ದಾರೆ.