ಬೆಂಗಳೂರು, ಅ.26(DaijiworldNews/AA): ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಪಟಾಕಿ ಅವಘಡ ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಇಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಅವರು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಲೋಪ ಆಗಬಾರದು. ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ಈ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ನಿರ್ದೇಶಿಸಿದ್ದಾರೆ.
ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಈ ಕುರಿತು ಡಿಸಿಗಳು, ಎಸ್ಪಿಗಳಿಗೆ ಸೂಚನೆ ನೀಡಿದ್ದೇನೆ. ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಅಧಿಕಾರಿಗಳು ಪಟಾಕಿ ದಾಸ್ತಾನುಗಳ ಪರಿಶೀಲನೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಬಾರದು. ನಿಯಮ ಮೀರಿದರೇ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.