ಬೆಂಗಳೂರು, ನ.15(DaijiworldNews/AK): ಮೊನ್ನೆ ನಡೆದ 3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಹಿನ್ನಡೆ ಆಗುವುದಾಗಿ ಖಾತ್ರಿಯಾಗಿ, ಕಾಂಗ್ರೆಸ್ಸಿನ ಘಟಾನುಘಟಿಗಳು ಇವತ್ತು ಸಾವಿರಾರು ಕೋಟಿಯೊಂದಿಗೆ ತಮ್ಮದೇ ಪಕ್ಷದ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂಬ ಮಾಹಿತಿ ನಮಗೂ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದ ಅವರು, ಆಡಳಿತದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರಿಗೂ ಈ ಮಾಹಿತಿ ಸಿಕ್ಕಿದೆ. ಹಾಗಾಗಿ, ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಆರೋಪ ಮಾಡಲು ಸಾಧ್ಯವಾಗದೇ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಶಾಸಕರ ಖರೀದಿ ವಿಚಾರಕ್ಕೆ ಬರುವ ದಿನಗಳಲ್ಲಿ ಕಾಲವೇ ಉತ್ತರ ಕೊಡಲಿದೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.
ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದೆ ಎಂಬುದು ಸ್ವತಃ ಸಿದ್ದರಾಮಯ್ಯನವರಿಗೆ ಮನವರಿಕೆ ಆಗಿದೆ. ಹಾಗಾಗಿ ಬಿಜೆಪಿ ವಿರುದ್ಧ ಈ ರೀತಿ ಆರೋಪ, ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ದೂರಿದರು. ಯಾವತ್ತು ರಾಜೀನಾಮೆ ಕೊಡುತ್ತಾರೆ? ಯಾರು ಹೊಸ ಸಿಎಂ ಎಂಬುದೇ ಪ್ರಶ್ನೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
ಕಾಂಗ್ರೆಸ್ ಪಕ್ಷದೊಳಗಡೆ ಕುದುರೆ ವ್ಯಾಪಾರ ನಡೆದಿದೆ. ಬಿಜೆಪಿಯಲ್ಲಿ ಇರುವುದು ಕೇವಲ 66 ಶಾಸಕರು ಮಾತ್ರ. ಆ ಪ್ರಶ್ನೆ ಉದ್ಭವಿಸುವುದಿಲ್ಲ; ಸಿದ್ದರಾಮಯ್ಯನವರೇ, ನಿಮ್ಮ ಅಕ್ಕಪಕ್ಕ ಇರುವ ಹಿರಿಯ ಸಚಿವರಿಗೆ ತಾವು ಭಯ ಪಡಬೇಕಿದೆ. ಬಿಜೆಪಿ ಬಗ್ಗೆ ಆತಂಕ ಬೇಕಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಹತಾಶರಾಗಿ ಮಾತನಾಡಿದ್ದಾರೆ. ಬಿಜೆಪಿ, ಕಾಂಗ್ರೆಸ್ ಪಕ್ಷದ ಶಾಸಕರಿಗೆ ₹50 ಕೋಟಿಯನ್ನು ಆಮಿಷವಾಗಿ ಒಡ್ಡುತ್ತಿದ್ದು, ಸರಕಾರ ಅಸ್ಥಿರಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಸಿದ್ದರಾಮಯ್ಯನವರು ಮಾಡಿದ್ದು ಬಿಜೆಪಿ ವಿರುದ್ಧ ನೇರ ಆರೋಪ ಮಾಡಿದ್ದಾಗಿ ಆಕ್ಷೇಪಿಸಿದರು.
ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಳಿಕ ಯಾವಾಗ ಬೇಕಿದ್ದರೂ ತೀರ್ಮಾನ ಆಗಲಿದೆ. ಸಿದ್ದರಾಮಯ್ಯನವರು ಅತಿ ಶೀಘ್ರದಲ್ಲೇ ರಾಜೀನಾಮೆ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
3 ಕ್ಷೇತ್ರಗಳಲ್ಲೂ ಬಿಜೆಪಿ- ಎನ್ಡಿಎ ಗೆದ್ದು ಹೊಸ ಇತಿಹಾಸ ಸೃಷ್ಟಿ
ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರಿನ ವಿಧಾನಸಭಾ ಉಪ ಚುನಾವಣೆಯಲ್ಲಿ ಎನ್ಡಿಎ ಗೆಲ್ಲಲಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ಭ್ರಮೆಯಲ್ಲಿತ್ತು. ಆದರೆ, ಅಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರು ಗೆದ್ದೇಗೆಲ್ಲುವ ವಾತಾವರಣ ಇದೆ ಎಂದು ತಿಳಿಸಿದರು. ಅದೇರೀತಿ ಸಂಡೂರಿನಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿನ ವಿಶ್ವಾಸ ಇದೆ. ಶಿಗ್ಗಾಂವಿಯಲ್ಲೂ ಭರತ್ ಬೊಮ್ಮಾಯಿಯವರು ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. 3 ಕ್ಷೇತ್ರಗಳಲ್ಲೂ ಬಿಜೆಪಿ- ಎನ್ಡಿಎ ಗೆದ್ದು ಹೊಸ ಇತಿಹಾಸ ಸೃಷ್ಟಿ ಆಗಲಿದೆ ಎಂದು ತಿಳಿಸಿದರು.