ಹೈದರಾಬಾದ್, ಜೂ 06 (Daijiworld News/SM): ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದೆ. ಇದೀಗ ಗಾಯದ ಮೇಲೆ ಬರೆ ಎಂಬಂತೆ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷದ 12 ಮಂದಿ ಶಾಸಕರು ಪಕ್ಷಕ್ಕೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ.
119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ 18 ಶಾಸಕರನ್ನು ಹೊಂದಿದ್ದು, ಈ ಪೈಕಿ 12 ಕಾಂಗ್ರೆಸ್ ಶಾಸಕರು ತೆಲಂಗಾಣ ಸ್ಪೀಕರ್ ಪಿ.ಶ್ರೀನಿವಾಸ್ ರೆಡ್ಡಿ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದಿಂದ ಆಡಳಿತಾರೂಢ ಟಿಆರ್ ಎಸ್ ಜೊತೆ ವಿಲೀನವಾಗುವ ಬಗ್ಗೆ ನಿವೇದನಾ ಪತ್ರ ಸಲ್ಲಿಸಿದ್ದಾರೆ. ಆ ಮೂಲಕ ಕಾಂಗ್ರೆಸ್ ಗೆ ಶಾಕ್ ನೀಡಿದ್ದಾರೆ.
ಈಗಾಗಲೇ ಕಾಂಗ್ರೆಸ್ ನ 12 ಶಾಸಕರು ಟಿಆರ್ ಎಸ್ ಸೇರುವುದಾಗಿ ಘೋಷಿಸಿದ್ದಾರೆ. ಒಂದು ವೇಳೆ ಸ್ಪೀಕರ್ ಕಾಂಗ್ರೆಸ್ ಶಾಸಕರ ಮನವಿಯನ್ನು ಒಪ್ಪಿಕೊಂಡರೆ, ಕಾಂಗ್ರೆಸ್ ಪ್ರತಿಪಕ್ಷದ ಸ್ಥಾನವನ್ನೂ ಕೂಡ ಕಳೆದುಕೊಳ್ಳಲಿದೆ. ಇನ್ನು ಈ ನಡುವೆ ಟಿಆರ್ ಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಕಾಂಗ್ರೆಸ್ ಶಾಸಕರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗುವುದಿಲ್ಲ ಎಂದು ತಿಳಿದು ಬಂದಿದೆ.