ನವದೆಹಲಿ, ಜೂ06(Daijiworld News/SS): ಬಳ್ಳಾರಿಗೆ ಭೇಟಿ ನೀಡಲು ಅನುಮತಿ ನೀಡುವಂತೆ ಸುಪ್ರೀಂಕೋರ್ಟ್ಗೆ ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಮನವಿ ಮಾಡಿದ್ದಾರೆ.
ಅನಾರೋಗ್ಯಕ್ಕೆ ಒಳಗಾಗಿರುವ ತಮ್ಮ ಮಾವನನ್ನು ನೋಡಲು ಬಳ್ಳಾರಿ ಜಿಲ್ಲೆಗೆ ಪ್ರವೇಶಿಸಲು ಅನುಮತಿ ಕೋರಿ ಜನಾರ್ದನ ರೆಡ್ಡಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರ ನೇತೃತ್ವದ ರಜೆಕಾಲದ ನ್ಯಾಯಪೀಠ ಶುಕ್ರವಾರ ಕೈಗೆತ್ತಿಕೊಳ್ಳಲಿದೆ.
ಅನಾರೋಗ್ಯಕ್ಕೆ ಒಳಗಾಗಿರುವ ತಮ್ಮ ಮಾವ ಬಳ್ಳಾರಿಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ಅವರನ್ನು ನೋಡಲು ಬಳ್ಳಾರಿಗೆ ಹೋಗಬೇಕಿದೆ ಎಂದು ರೆಡ್ಡಿ ಅರ್ಜಿಯಲ್ಲಿ ವಿವರಿಸಿದ್ದಾರೆ.
ಅಕ್ರಮ ಗಣಿಗಾರಿಕೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಜನಾರ್ದನ ರೆಡ್ಡಿ ಅವರ ಪ್ರಕರಣ ವಿಚಾರಣೆಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಅವರು ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇರುವುದರಿಂದ ಬಳ್ಳಾರಿಗೆ ಪ್ರವೇಶಿಸಬಾರದು ಎಂದು ಸುಪ್ರೀಂಕೋರ್ಟ್ ನಿರ್ಬಂಧ ವಿಧಿಸಿತ್ತು. ಸುಪ್ರೀಂಕೋರ್ಟ್ ವಿಧಿಸಿರುವ ನಿಬಂಧನೆಯಂತೆ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆಗೆ ಕಾಲಿಡುವಂತಿಲ್ಲ.