ಮೈಸೂರು, ಜೂ 07 (Daijiworld News/MSP): ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಂ.ಸತ್ಯನಾರಾಯಣ (74) ಅನಾರೋಗ್ಯದಿಂದ ಗುರುವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ರಾತ್ರಿ 11.10ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಇವರಿಗೆ ಪತ್ನಿ ಲಕ್ಷ್ಮಿ, ಪುತ್ರರಾದ ಅರುಣ್ಕುಮಾರ್, ಜಗದೀಶ್ ಹಾಗೂ ಪುತ್ರಿ ಎಸ್.ಸುನಿತಾ ಇದ್ದಾರೆ.ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇವರು ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಮಾತ್ರವಲ್ಲದೆ ಸೌಮ್ಯ ಸ್ವಭಾವ ರಾಜಕಾರಣಿ ಎಂದೇ ಹೆಸರು ಮಾಡಿದ್ದರು. ಅವರು 2008ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು.ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದ ಸಿದ್ದರಾಮಯ್ಯ ಅವರು ಕ್ಷೇತ್ರ ಪುನರ್ ವಿಂಗಡಣೆ ಕಾರಣ ಆಗ ವರುಣಾ ಕ್ಷೇತ್ರದಿಂದ ಕಣಕ್ಕಿಳಿದರು. ಹೀಗಾಗಿ, ಚಾಮುಂಡೇಶ್ವರಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತ್ಯನಾರಾಯಣ ಸ್ಪರ್ಧಿಸಿದ್ದರು.