ನವದೆಹಲಿ, ಜೂ07(Daijiworld News/SS): ಬಳ್ಳಾರಿಗೆ ಭೇಟಿ ನೀಡಲು ಅನುಮತಿ ನೀಡುವಂತೆ ಸುಪ್ರೀಂಕೋರ್ಟ್ಗೆ ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಮನವಿ ಮಾಡಿದ್ದರು. ಇದೀಗ ಬಳ್ಳಾರಿಗೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ಮಾಜಿ ಸಚಿವರ ಮನವಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿರುವ ಜನಾರ್ದನ ರೆಡ್ಡಿ ಅವರು, ಬಳ್ಳಾರಿ ಪ್ರವೇಶಿಸದಂತೆ ತಮ್ಮ ಮೇಲೆ ಹೇರಿರುವ ನಿರ್ಬಂಧವನ್ನು ಸಡಿಲ ಮಾಡಬೇಕು ಎಂದು ಕೋರಿದ್ದರು. ಇದೀಗ ಇದನ್ನು ಮಾನ್ಯ ಮಾಡಿರುವ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ನೇತೃತ್ವದ ರಜಾಕಾಲದ ನ್ಯಾಯಪೀಠ ಎರಡು ವಾರ ಬಳ್ಳಾರಿಗೆ ತೆರಳಲು ಅನುಮತಿ ನೀಡಿದೆ.
ಜೂ.08ರಿಂದ 2 ವಾರಗಳ ಕಾಲ ಅವರು ಬಳ್ಳಾರಿಯಲ್ಲಿ ಇರಬಹುದು. ಆದರೆ, ಈ ಭೇಟಿ ವೇಳೆ ತಮ್ಮ ವಿರುದ್ಧ ಸಾಕ್ಷ್ಯಗಳ ನಾಶಪಡಿಸುವ ಪ್ರಯತ್ನ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಡೆಸದಂತೆ ಷರತ್ತು ವಿಧಿಸಲಾಗಿದೆ.
ಅಕ್ರಮ ಗಣಿಗಾರಿಕೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಜನಾರ್ದನ ರೆಡ್ಡಿ ಅವರ ಪ್ರಕರಣ ವಿಚಾರಣೆಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಅವರು ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇರುವುದರಿಂದ ಬಳ್ಳಾರಿಗೆ ಪ್ರವೇಶಿಸಬಾರದು ಎಂದು ಸುಪ್ರೀಂಕೋರ್ಟ್ ನಿರ್ಬಂಧ ವಿಧಿಸಿತ್ತು.