ತಿರುವನಂತಪುರ, ಜೂ08(Daijiworld News/SS): ಕೇರಳಕ್ಕೆ ನೈರುತ್ಯ ಮಾನ್ಸೂನ್ ಮಾರುತಗಳು ಅಪ್ಪಳಿಸಿದ್ದು, ಭಾರಿ ಮಳೆ ಹಿನ್ನಲೆಯಲ್ಲಿ ಕೇರಳದ 9 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಕೇರಳದ ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ತ್ರಿಸ್ಸೂರು, ಮಲ್ಲಪುರಂ ಮತ್ತು ಕೋಝಿಕೋಡ್ ನಲ್ಲಿ ಅತಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿತ್ತು.
ಇದೀಗ ತಿರುವನಂತಪುರಂ, ಕೊಲ್ಲಂ, ಕೊಟ್ಟಯಾಂ ಸೇರಿದಂತೆ 9 ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಪ್ರಸ್ತುತ ಕೇರಳದಲ್ಲಿ ನೈರುತ್ಯ ಮಾನ್ಸೂನ್ ಮಾರುತಗಳು ಪ್ರತೀ ಗಂಟೆಗೆ 35ರಿಂದ 45 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಸ್ಥಳೀಯ ಜಿಲ್ಲಾಡಳಿತ ಸೂಚನೆ ನೀಡಿದೆ.
ಈಗಾಗಲೇ ಪ್ರವಾಹ ಪರಿಸ್ಥಿತಿ ಎದುರಿಸಲು ಕ್ರಮ ಕೈಗೊಳ್ಳಲಾಗಿದ್ದು, ತಗ್ಗು ಪ್ರದೇಶಗಳು ಮತ್ತು ನದಿಪಾತ್ರದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯ ಸಾಗಿದೆ. ರಾಜ್ಯದಲ್ಲಿ ಈಗಾಗಲೇ ಕೆಲವು ಸ್ಥಳಗಳಲ್ಲಿ ರೆಡ್ ಆಲರ್ಟ್ ಘೋಷಣೆಯಾಗಿದ್ದು, ಅಗತ್ಯ ಕ್ರಮಕ್ಕೆ ಸಜ್ಜಾಗುವಂತೆ ವಿವಿಧ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.