ಬೆಳಗಾವಿ, ಜ.19 (DaijiworldNews/AA): ಮೈಸೂರಿನ ಮೂಡಾ ನಿವೇಶನ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪಿತಸ್ಥರು ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಪ್ರಕರಣದ ನಿಷಕ್ಷಪಾತ ತನಿಖೆಗೆ ಸಿಬಿಐಗೆ ವಹಿಸುವ ಅಗತ್ಯವಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ನಿವೇಶನವನ್ನು ಹಿಂದಿರುಗಿಸಿದ್ದಾರೆ. ಜತೆಗೆ ಅಕ್ರಮ ನಡೆದಿರುವ ನಿವೇಶನಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಜಾರಿ ನಿರ್ದೇಶನಾಲಯ ನಿಷಕ್ಷಪಾತದಿಂದ ತನಿಖೆ ನಡೆಸುತ್ತಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರಕ್ಕಾಗಿ ಕಚ್ಚಾಟ, ಭಿನ್ನಾಭಿಪ್ರಾಯ ತಲೆದೂರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಧಿತಿ ಎದುರಾಗಿದೆ. ರಾಜ್ಯ ಸರ್ಕಾರಕ್ಕೆ ಜಾತಿಗಣತಿ ನಡೆಸುವ ಅಧಿಕಾರವಿಲ್ಲ, ಅದು ಕೇಂದ್ರ ಸರ್ಕಾರಕ್ಕೆ ಮಾತ್ರ. ಈ ಕಾರಣಕ್ಕೆ ರಾಜ್ಯದಲ್ಲಿ ಜಾತಿ ಗಣತಿ ವರದಿಯನ್ನು ಸಚಿವ ಸಂಪುಟದ ಮುಂದೆ ತರಲು ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದರು.