ಉತ್ತರ ಪ್ರದೇಶ,.ಜೂ11(DaijiworldNews/AZM): ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಬಂಧಿಸಿದ ಪತ್ರಕರ್ತನಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪತ್ರಕರ್ತನಾಗಿರುವ ಪ್ರಶಾಂತ್ ಕನೋಜಿಯಾನನ್ನು ಬಂಧಿಸಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಪತ್ರಕರ್ತನಿಗೆ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಪ್ರತಿಕಾ ಸ್ವಾತಂತ್ರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಪತ್ರಕರ್ತನ ಬಂಧನಕ್ಕೆ ಉತ್ತರ ಪ್ರದೇಶ ಮಾತ್ರವಲ್ಲದೇ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ದೆಹಲಿಯಲ್ಲಿ ಸಂಪಾದಕರ ಒಕ್ಕೂಟ ಕೂಡ ಘಟನೆಯನ್ನು ಖಂಡಿಸಿತ್ತು.
ಸುಪ್ರೀಂ ಕೋರ್ಟ್ ಕೂಡ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದೆ. ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡಬಾರದು. ಸಂವಿಧಾನ ನಾಗರಿಕರ ಹಕ್ಕುಗಳಿಗೆ ಪ್ರಾಮುಖ್ಯತೆ ನೀಡುತ್ತದೆ. ಯಾವುದೇ ಕಾರಣಕ್ಕೂ ಅದನ್ನು ಉಲ್ಲಂಘಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಂತೆಯೇ ಸಾಮಾಜಿಕ ಮಾಧ್ಯಮಗಳಲ್ಲಿ ಟ್ವಿಟ್ ಮಾಡಿದ್ದರು ಎಂದು ಬಂಧಿಸುವುದು ಎಷ್ಟು ಸೂಕ್ತ, ಯಾವ ಆಧಾರದಲ್ಲಿ ಬಂಧಿಸಲಾಗಿದೆ ಎಂದು ನ್ಯಾಯಾಲಯ ಯುಪಿ ಸರ್ಕಾರವನ್ನು ಪ್ರಶ್ನಿಸಿದೆ.
ಸಾಮಾನ್ಯವಾಗಿ ನ್ಯಾಯಾಲಯ ಈ ರೀತಿಯ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಿಲ್ಲ, ಆದರೆ ಒಬ್ಬ ವ್ಯಕ್ತಿಯನ್ನು ಇಷ್ಟೊಂದು ದಿನಗಳ ಕಾಲ ಜೈಲಿನಲ್ಲಿ ಇರಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ನ್ಯಾಯಾಲಯ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಒಬ್ಬೊಬ್ಬರ ಅಭಿಪ್ರಾಯಗಳು ಭಾವನೆಗಳು ಒಂದೊಂದು ತೆರನಾಗಿರುತ್ತದೆ. ಆದರೆ ಆತ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಮಾಡಬಾರದಿತ್ತು. ಆದರೆ ಆತನನ್ನು ನೀವು ಯಾವ ಆಧಾರದ ಮೇಲೆ ಬಂಧಿಸಿದ್ದೀರಿ ಎಂದು ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಮತ್ತು ಅಜಯ ರಸ್ತೋಗಿ ನೇತೃತ್ವದ ರಜಾ ಕಾಲದ ನ್ಯಾಯಪೀಠ ಪ್ರಶ್ನಿಸಿದೆ.