ಬೆಂಗಳೂರು, ಮಾ,01 (DaijiworldNews/AK):ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದ್ದಾರೆ.

ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್ಗಳಿಗೆ ದಿನ 7 ಗಂಟೆ ಮತ್ತು ಇತರ ಉದ್ದೇಶಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವ ವಾಗ್ಧಾನವನ್ನು ಈಡೇರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ ಬೇಡಿಕೆ ಇರುವಷ್ಟು ವಿದ್ಯುತ್ ಲಭ್ಯವಿದೆ. ಸ್ಥಳೀಯವಾಗಿ ತಾಂತ್ರಿಕ ಕಾರಣಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಬಹುದೇ ಹೊರತು ಲೋಡ್ ಶೆಡ್ಡಿಂಗ್ ಮಾಡುವ ಸಂದರ್ಭ ಉದ್ಭವವಾಗುವುದಿಲ್ಲ ಎಂದರು.
ಗೃಹ ಬಳಕೆಗೆ ದಿನದ 24 ಗಂಟೆಯೂ ವಿದ್ಯುತ್ ಪೂರೈಸಬೇಕು ಎಂಬ ಉದ್ದೇಶದಿಂದ ಸಿಂಗಲ್ ಫೇಸ್ ವಿದ್ಯುತ್ ಒದಗಿಸಲು ರಾಜ್ಯ ಸರ್ಕಾರ ನಿರಂತರ ಜ್ಯೋತಿ ಯೋಜನೆ ಜಾರಿಗೆ ತಂದಿದೆ. ಅಲ್ಲದೆ, ತೋಟದ ಮನೆಗಳಲ್ಲಿ ವಾಸಿಸುವವರು ಅನುಕೂಲಕ್ಕಾಗಿ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ಆದರೆ, ಸಿಂಗಲ್ ಫೇಸ್ ವಿದ್ಯುತ್ ಪೂರೈಸುವ ಸಂದರ್ಭದಲ್ಲಿ ರೈತರು ಕನ್ವರ್ಟರ್ಗಳನ್ನು ಬಳಸಿ ಕೃಷಿ ಪಂಪ್ಸೆಟ್ಗಳನ್ನು ಬಳಸುತ್ತಿದ್ದಾರೆ. ಇದರಿಂದ ಟ್ರಿಪ್ ಆಗಿ ಇಡೀ ಪ್ರದೇಶದಲ್ಲೇ ವಿದ್ಯುತ್ ಪೂರೈಕೆ ಸ್ಥಗಿತಗೊಂಡು ಜನರು ತೊಂದರೆಗೊಳಗಾಗುತ್ತಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆಗೆ ಕನ್ವರ್ಟರ್ ಅಳವಡಿಸಿ ಐಪಿ ಸೆಟ್ ಗಳನ್ನು ಬಳಸಬಾರದು ಎಂದು ಕೆ.ಜೆ.ಜಾರ್ಜ್ ಮನವಿ ಮಾಡಿದರು.