ಬೆಂಗಳೂರು, ಮಾ.02 (DaijiworldNews/AA): ಕಲಾವಿದರು ನಿಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ. ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿ ಕಲಾವಿದರನ್ನು ನಡೆಸಿಕೊಳ್ಳಬೇಡಿ. ಕಲಾವಿದರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದು, ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಇದೀಗ ಈ ಬಗ್ಗೆ ಸಾಮಾಜಿಕ ಮಾದ್ಯಮ ಎಕ್ಸ್ನಲ್ಲಿ ಟ್ವಿಟ್ ಮಾಡಿರುವ ಅಶೋಕ್ ಅವರು, ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದರು.
ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.
ಸಮಾಜದಲ್ಲಿ ಎಲ್ಲರೂ ತಮಗೆ ಮತ್ತು ತಮ್ಮ ಪಕ್ಷಕ್ಕೆ ಸೆಲ್ಯೂಟ್ ಹೊಡೆದು, ತಮ್ಮ ಅಡಿಯಾಳುಗಳಂತೆ ನಡೆದುಕೊಳ್ಳಬೇಕು ಎನ್ನುವ ಕೆಟ್ಟ ಮನಸ್ಥಿತಿಯಿಂದ ಹೊರಗೆ ಬನ್ನಿ. ಕಲಾವಿದರು ಯಾರ ಸ್ವತ್ತೂ ಅಲ್ಲ. ಕಲಾವಿದರಿಗೆ ಅವರ ವಿವೇಚನೆಗೆ ತಕ್ಕಂತೆ ನಡೆದುಕೊಳ್ಳುವ, ಯಾರ ಜೊತೆ ಬೇಕಾದರೂ ಗುರುತಿಸಿಕೊಳ್ಳುವ ಅಥವಾ ಗುರುತಿಸಿಕೊಳ್ಳದಿರುವ ಸ್ವಾತಂತ್ರ್ಯವಿದೆ, ಹಕ್ಕಿದೆ ಎಂದು ಕಿಡಿಕಾರಿದ್ದಾರೆ.