ಬೆಂಗಳೂರು, ಮಾ.07 (DaijiworldNews/AK) :ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ ೫೩ ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು ಎಂದು ಸಿಎಂ ಬಜೆಟ್ ಘೋಷಿಸಿದ್ದಾರೆ.

500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳು:
ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್
ಡೆವಲಪ್ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿದರು.
ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು.ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ
ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು.. LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.