ನವದೆಹಲಿ, ಮಾ.09 (DaijiworldNews/AA): ಎದೆನೋವು ಕಾಣಿಸಿಕೊಂಡು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಏಮ್ಸ್ಗೆ ಭೇಟಿ ನೀಡಿದ್ದು, ಧನಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಏಮ್ಸ್ಗೆ ಹೋಗಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಜೀ ಅವರ ಆರೋಗ್ಯ ವಿಚಾರಿಸಿದೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಜಗದೀಪ್ ಧನಕರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ನಸುಕಿನ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಎಐಐಎಂಎಸ್ನಲ್ಲಿ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.