ನವದೆಹಲಿ, ಮಾ.18 (DaijiworldNews/AK): ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏ.2ಕ್ಕೆ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ನಡೆಯಬೇಕಿತ್ತು. ವಿಚಾರಣೆಗೆ ಪಟ್ಟಿಯಾಗದ ಹಿನ್ನೆಲೆ ದರ್ಶನ್ ಪ್ರಕರಣದಲ್ಲಿನ ರಾಜ್ಯದ ವಿಶೇಷ ವಕೀಲ ಅನಿಲ್ ನಿಶಾನಿ ಅರ್ಜಿ ವಿಚಾರಣೆ ನಡೆಸುವಂತೆ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಕೋರ್ಟ್ ಏ. 2 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.
ಕಳೆದ ವಿಚಾರಣೆಯಲ್ಲಿ ಅರ್ಜಿ ವಿಚಾರಣೆಗೆ ಒಪ್ಪಿಕೊಂಡಿದ್ದ ಸುಪ್ರೀಂಕೋರ್ಟ್ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿತ್ತು.
ನಟ ದರ್ಶನ್ 131 ದಿನಗಳ ಜೈಲುವಾಸದ ನಂತರ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಅ.30 ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ನಂತರ ಹೈಕೋರ್ಟ್ ಡಿ.13 ರಂದು ದರ್ಶನ್ ಮತ್ತು ಪ್ರಮುಖ ಆರೋಪಿ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.