ಬೆಂಗಳೂರು,ಮಾ.18 (DaijiworldNews/AK): ತೀವ್ರ ವಿರೋಧದ ನಡುವೆಯೂ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದಂತೆ ಹಿಂದುಳಿದ ವರ್ಗಗಳಿಗೆ ಹಾಗೂ ಅಲ್ಪಸಂಖ್ಯಾತರಿಗೆ ಸಾರ್ವಜನಿಕ ಸರಕು ಹಾಗೂ ಸರ್ಕಾರಿ ಗುತ್ತಿಗೆಗಳಲ್ಲಿ ಮೀಸಲಾತಿ ನೀಡುವ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ವಿಧಾನಸಭೆಯಲ್ಲಿಂದು ಮಂಡಿಸಿದರು.
ಬಜೆಟ್ನ ಆಯವ್ಯಯಕ್ಕೆ ವಿಧಾನಮಂಡಲ ಇನ್ನೂ ಅಂಗೀಕಾರ ನೀಡಿಲ್ಲ. ಅದಕ್ಕೂ ಮೊದಲೇ ವಿಧೇಯಕವನ್ನು ಮಂಡಿಸಿ ಮಂಡಿಸಿರುವುದು ಅಚ್ಚರಿ ಉಂಟು ಮಾಡಿದೆ.
ಬಹುತೇಕ ಬಜೆಟ್ ಘೋಷಣೆಗಳು ಆಯವ್ಯಯದ ಅಂಗೀಕಾರದ ಬಳಿಕ ಮೂರ್ನಾಲ್ಕು ತಿಂಗಳಾದ ಮೇಲೆ ವಿಧೇಯಕಗಳಾಗುತ್ತವೆ. ಆದರೆ ಮುಖ್ಯಮಂತ್ರಿಯವರ ಪರವಾಗಿ ಇಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ-2025ಅನ್ನು ಮಂಡಿಸಿದರು. ಈವರೆಗೂ ಸರ್ಕಾರಿ ಗುತ್ತಿಗೆಯಲ್ಲಿ ಎಸ್ಸಿ ಹಾಗೂ ಎಸ್ಟಿಗಳಿಗೆ ಮಾತ್ರ ಮೀಸಲಾತಿ ಇದ್ದು, ಇದೀಗ ಪ್ರವರ್ಗ 2 ಬಿಗೆ ಬರುವ ಮುಸ್ಲಿಮರಿಗೂ ಅವಕಾಶ ಕಲ್ಪಿಸಲಾಗಿದೆ.
ಈ ವಿಧೇಯಕದ ಪ್ರಕಾರ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ, ಕರ್ನಾಟಕ ಗ್ರಾಮಸ್ವರಾಜ್ಯ ಮತ್ತು ಪಂಚಾಯತ್ ರಾಜ್, ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆಗಳು, ಪುರಸಭೆಗಳು, ಪಟ್ಟಣ ಪಂಚಾಯಿತಿ, ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸರ್ಕಾರಿ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಲು ಅವಕಾಶ ಕಲ್ಪಿಸಲಾಗಿದೆ.