ಬೆಂಗಳೂರು, ಜೂ16(Daijiworld News/SS): ಕಳೆದ ಕೆಲ ದಿನಗಳಿಂದ ಜಿಂದಾಲ್ ಕಂಪನಿಗೆ ಭೂಮಿ ಕೊಡುವ ವಿಚಾರವಾಗಿ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿರುವ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ ಸಿಎಂ ಅವರು, ರಾಜ್ಯದಲ್ಲಿ ಬರ ಪರಿಹಾರ ನಿರ್ವಹಣೆ, ರೈತರ ಸಾಲ ಮನ್ನಾ ಯೋಜನೆ ಹಾಗೂ ಜಿಂದಾಲ್ ಸಂಸ್ಥೆಗೆ ಭೂಮಿ ಮಾರಾಟ ಕುರಿತಂತೆ ರಾಜ್ಯ ಸರ್ಕಾರದ ಕ್ರಮಗಳನ್ನು ಪ್ರತಿಭಟಿಸಿ ತಮ್ಮ ನಾಯಕತ್ವದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ಸರ್ಕಾರವು ಬರ ಪರಿಹಾರ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ರಾಜ್ಯದ ಜನರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.
ರೈತರ ಸಾಲ ಮನ್ನಾ ಯೋಜನೆಯನ್ನು ಸಹ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಜಿಂದಾಲ್ ಸಂಸ್ಥೆಗೆ ಭೂಮಿ ಮಾರಾಟ ಕುರಿತಂತೆ ಪುನರ್-ವಿಮರ್ಶಗೆ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗುತ್ತದೆ. ದಿನಾಂಕ 16ರಂದು ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಪ್ರಕಟಿಸಿರುವದನ್ನು ಗಮನಿಸಿದ್ದೇನೆ. ತಮ್ಮೊಂದಿಗೆ ಚರ್ಚಿಸಲು ನಾನು ಸದಾ ಸಿದ್ಧನಾಗಿದ್ದೇನೆ. ತಮ್ಮ ಸಮಯಕ್ಕೆ ಅನುಗುಣವಾಗಿ ಚರ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪತ್ರದಲ್ಲಿ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.
ಸಚಿವ ವೆಂಕಟರಾವ್ ನಾಡಗೌಡ ಅವರು ಬಿಜೆಪಿ ನಾಯಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ಪತ್ರವನ್ನು ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಿದರು.