ದಾವಣಗೆರೆ, ಮಾ.31 (DaijiworldNews/AA): ನ್ಯಾಮತಿಯ ಬ್ಯಾಂಕೊಂದರಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಬ್ಯಾಂಕಿನಿಂದ ಕದ್ದೊಯ್ದಿದಿದ್ದ 17.750 ಕೆಜಿ ಚಿನ್ನಾಭರಣಗಳನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ. ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ವಿಚಾರ ಬೆಳಕಿಗೆ ಬಂದಿದ್ದು, ಚಿನ್ನ ಮುಚ್ಚಿಟ್ಟಿದ್ದು, ದರೋಡೆಗೆ ಕಾರಣ, ಸಂಚು ಎಲ್ಲವನ್ನೂ ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ.
ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ವಿಜಯ್ ಕುಮಾರ್ ನ್ಯಾಮತಿಯಲ್ಲಿ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಬ್ಯಾಂಕಿನಲ್ಲಿ ಲೋನ್ ಪಡೆಯಲು ಎರಡು ಬಾರಿ ಅರ್ಜಿ ಹಾಕಿದ್ದ, ಈ ಅರ್ಜಿ ತಿರಸ್ಕಾರವಾಗಿತ್ತು. ಇದರಿಂದ ರೋಸಿ ಹೋಗಿದ್ದ. ಇದೇ ಕಾರಣಕ್ಕೆ ಬ್ಯಾಂಕ್ ದರೋಡೆಗೆ ಹಿಂದಿ ವೆಬ್ ಸೀರಿಸ್ ನೋಡಿ ದರೋಡೆಗೆ ಸಂಚು ರೂಪಿಸಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ.
ಆರೋಪಿಗಳು ಮೊಬೈಲ್, ವಾಹನ ಬಳಸದೇ, ಯಾವ ಸಾಕ್ಷಿಯನ್ನೂ ಬಿಡದೆ ದರೋಡೆ ಮಾಡಿದ್ದರು. ದರೋಡೆ ಮಾಡಿದ 17 ಕೆಜಿ ಚಿನ್ನವನ್ನು ತಮಿಳುನಾಡಿನ ಮಧುರೈನಲ್ಲಿರುವ ತೋಟದ ಮನೆಯ ಪಾಳು ಬಿದ್ದ ಬಾವಿಯಲ್ಲಿ ಲಾಕರ್ನಲ್ಲಿ ಇಟ್ಟಿದ್ದರು ಎನ್ನಲಾಗಿದೆ.