ಬೆಂಗಳೂರು, ಮಾ.31 (DaijiworldNews/AK): ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ- ಪ್ರತಿಭಟನೆ ನಡೆಸಲಿದೆ. ರಾಜ್ಯ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಕೆಲಸವನ್ನು ಹೋರಾಟದ ಮುಖೇನ ಮಾಡಲು ನಿರ್ಧರಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಏರ್ಪಡಿಸಿದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ್ದನ್ನು ಆಕ್ಷೇಪಿಸಿ ಅದೇದಿನ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ಈ ಧರಣಿ ತುದಿ ಮುಟ್ಟಿಸುವ ಕುರಿತು ಏ.2ರಂದು ನಿರ್ಧರಿಸಲಿದ್ದೇವೆ ಎಂದು ಹೇಳಿದರು. ಏ.5ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ, ತಾಲ್ಲೂಕುಗಳಲ್ಲಿ, ಮಂಡಲದಲ್ಲಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಾರೆ ಎಂದರು.
7ರಿಂದ ರಾಜ್ಯದಾದ್ಯಂತ ಜನಜಾಗೃತಿಗೆ ‘ಜನಾಕ್ರೋಶ ಯಾತ್ರೆ’
ಏಪ್ರಿಲ್ 7ರಂದು ಮಧ್ಯಾಹ್ನ 3ಕ್ಕೆ ಮೈಸೂರಿನಿಂದ ಜನಜಾಗೃತಿ ಹೋರಾಟ ಆರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಹೋರಾಟಕ್ಕೆ ಚಾಲನೆ ಕೊಡಲಿದ್ದಾರೆ. ಕೇಂದ್ರದ ಸಚಿವರಾದ ಸೋಮಣ್ಣ, ಶೋಭಾ ಕರಂದ್ಲಾಜೆ ಅವರ ಜೊತೆ ಚರ್ಚಿಸಿದ್ದೇನೆ. ಜನಾಕ್ರೋಶ ಯಾತ್ರೆ ಇದಾಗಿದೆ. 7ರಂದು ಮೈಸೂರು, ಚಾಮರಾಜನಗರ ಜಿಲ್ಲೆ, 8ರಂದು ಬೆಳಿಗ್ಗೆ ಮಂಡ್ಯ, ಮಧ್ಯಾಹ್ನ ಹಾಸನದಲ್ಲಿ ಹೋರಾಟ ಇದೆ. 9ರಂದು ಕೊಡಗು- ಮಂಗಳೂರಿನಲ್ಲಿ ಹೋರಾಟ, 10ರಂದು ಉಡುಪಿ, ಚಿಕ್ಕಮಗಳೂರಿನಲ್ಲಿ ಮೊದಲ ಹಂತದ ಹೋರಾಟ ಇದೆ ಎಂದರು.
13ರಿಂದ ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಎರಡನೇ ಹಂತದ ಹೋರಾಟ ಇರುತ್ತದೆ. ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಇದು ಸಂಚರಿಸಲಿದೆ ಎಂದು ವಿವರಿಸಿದರು.
ಪ್ರತಿ ಜಿಲ್ಲೆಯಲ್ಲಿ ನಗರದಲ್ಲಿ 2-3 ಕಿಮೀ ಪಾದಯಾತ್ರೆ, ಬಳಿಕ ಸಭೆ ನಡೆಯಲಿದೆ. ಮುಖಂಡರು ಭಾಗವಹಿಸುತ್ತಾರೆ ಎಂದರು.