ಬೆಂಗಳೂರುಜೂ16(Daijiworld News/AZM): ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ ಸರ್ಕಾರಿ ಭೂಮಿ ಪರಭಾರೆ ನೀಡುತ್ತಿರುವುದನ್ನು ವಿರೋಧಿಸಿ ಇಂದು ಸಿಎಂ ಗೃಹಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ಮುಖಂಡರನ್ನು ಚಿತ್ರಕಲಾ ಪರಿಷತ್ ಬಳಿ ಬ್ಯಾರಿಕೇಡ್ ಹಾಕಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಿ.ಎಸ್. ಯಡಿಯೂರಪ್ಪ, ಆರ್. ಅಶೋಕ್, ಸಿ.ಟಿ. ರವಿ, ಅರವಿಂದ್ ಲಿಂಬಾವಳಿ, ರೇಣುಕಾಚಾರ್ಯ, ಸುರೇಶ್ ಕುಮಾರ್ ಸೇರಿದಂತೆ ಹಲವು ನಾಯಕರನ್ನು ಬಂಧಿಸಿದ ಪೊಲೀಸರು, ಅವರನ್ನು ಕಬ್ಬನ್ ಪಾರ್ಕ್ ಠಾಣೆಗೆ ಕರೆತಂದಿದ್ದಾರೆ.
ಬಂಧನಕ್ಕೂ ಮುನ್ನ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದರು. "ಜಿಂದಾಲ್ ಪ್ರಕರಣದಲ್ಲಿ ಭೂಮಿ ಮಾರಾಟವಾಗಬಾರದು. ಸರ್ಕಾರ ಜನರ ಕಣ್ಣಿಗೆ ಮಣ್ಣು ಎರಚಲು ಹೊರಟಿದೆ. ಸಿಎಂ ಕುಮಾರಸ್ವಾಮಿ ಜೊತೆ ಮಾತನಾಡೋದು ಏನಿದೆ? ಸಿಎಂ ಕುಮಾರಸ್ವಾಮಿ ವಿರುದ್ಧ ನಮ್ಮ ಹೋರಾಟ ಅಲ್ಲ. ಜನರ ನ್ಯಾಯಕ್ಕಾಗಿ ನಡೆಸುತ್ತಿರುವ ಹೋರಾಟವಾಗಿದೆ. ಜಿಂದಾಲ್ ಕಂಪನಿಯಲ್ಲಿ ಕನ್ನಡಿಗರಿಗೆ ಹುದ್ದೆ ಸಿಕ್ಕಿಲ್ಲ," ಎಂದು ಆಕ್ರೋಶ ವ್ಯಕ್ತಪಡಿಸಿದರು.