ನವದೆಹಲಿ,ಜೂ16(Daijiworld News/AZM): ಬಿಹಾರದಲ್ಲಿ ಬೀಸಿದ ಬಿಸಿ ಗಾಳಿಗೆ 44 ಮಂದಿ ಮೃತಪಟ್ಟಿರುವ ಘಟನೆ ನಡೆದಿದ್ದು, ಈ ಕುರಿತು ವಿಪತ್ತು ನಿರ್ವಹಣಾ ಅಧಿಕಾರಿಗಳು ದೃಢಪಡಿಸಿದ್ದಾರೆ.
ಬಿಹಾರದ ಔರಂಗಬಾದ್, ನವಾಡಾ ಮತ್ತು ಗಯಾ ಜಿಲ್ಲೆಗಳಲ್ಲಿ ಒಟ್ಟು 44 ಮಂದಿ ಬಿಸಿ ಗಾಳಿಗೆ ಮೃತಪಟ್ಟಿದ್ದಾರೆ. ಮೃತ ಕುಟುಂಬಗಳಿಗೆ ಸಿಎಂ ನಿತೀಶ್ ಕುಮಾರ್ ತಲಾ ₹ 4 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಿಹಾರದಂತೆಯೇ ದೇಶದೆಲ್ಲೆಡೆ ಬೇಸಿಗೆ ಬಿಸಿಲಿನ ಝಳ ಹೆಚ್ಚಾಗಿದ್ದು, ಬಿಸಿ ಗಾಳಿ ಬೀಸುತ್ತಿದೆ. ಇದರಿಂದಾಗಿ ದೇಹದಲ್ಲಿ ನೀರಿನಂಶ ಕಡಿಮೆಯಾಗಿ ನೂರಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇವರ ಪೈಕಿ 25 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರೆಲ್ಲರೂ ತೀವ್ರ ಜ್ವರದಿಂದ ಬಳಲುತ್ತಿದ್ದರು. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವವರ ಪರಿಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಔರಂಗಾಬಾದ್ ಜಿಲ್ಲಾಸ್ಪತ್ರೆಯ ಸರ್ಜನ್ ಡಾ. ಸುರೇಂದ್ರ ಪ್ರಸಾದ್ ಸಿಂಗ್ ಹೇಳಿದ್ದಾರೆ.