ಬೆಂಗಳೂರು, ಜೂ20(Daijiworld News/SS): ಸರ್ಕಾರ ಬೀಳಿಸಲು ಯತ್ನಿಸುತ್ತಿದ್ದಾರೆ ಎಂದು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ ಇದಕ್ಕೆಲ್ಲಾ ನಾವು ಕೈ ಹಾಕುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮುಂದಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹತಾಶರಾಗಿ ಆಪರೇಷನ್ ಕಮಲದ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಅವರು ಬೇಸರದಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸರ್ಕಾರ ಬೀಳಿಸಲು ಯತ್ನಿಸುತ್ತಿದ್ದಾರೆ ಎಂದು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಕೈ ಹಾಕುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಆದರೂ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಇದೇ ವೇಳೆ ವಿಪಕ್ಷಗಳ ಶಾಸಕರಿಗೆ ಹಣದ ಆಮಿಷ ಒಡ್ಡಿದ್ದಾರೆ ಎಂಬ ಮುಖ್ಯಮಂತ್ರಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಕುಮಾರಸ್ವಾಮಿ ಈ ರೀತಿ ಮನಸ್ಸಿಗೆ ಬಂದಂತೆ ಹೇಳುವ ಬದಲು ಯಾವ ಶಾಸಕರಿಗೆ, ಯಾರು ಹಣದ ಆಮಿಷ ಒಡ್ಡಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ರಾಜ್ಯದ ಮುಖ್ಯಮಂತ್ರಿಯಾಗಿ ಈ ರೀತಿ ಆರೋಪ ಮಾಡುವುದಕ್ಕಿಂತ ಮೊದಲು ಯಾರಿಗೆ ಆಹ್ವಾನ ಮಾಡಿದರು..?, ಆಹ್ವಾನಿಸಿದವರ ಹೆಸರೇನು..? ಎಂದು ಬಹಿರಂಗಪಡಿಸಿದರೆ ಮುಖ್ಯಮಂತ್ರಿಗಳಿಗೂ ಗೌರವ ಬರುತ್ತದೆ. ಇಲ್ಲದಿದ್ದಲ್ಲಿ ಅವರು ತಮ್ಮ ಶಾಸಕರ ಬಗ್ಗೆಯೇ ಅನುಮಾನಪಟ್ಟಂತಾಗುತ್ತದೆ ಎಂದು ಹೇಳಿದರು.
ಕುಮಾರಸ್ವಾಮಿ ಸುಖಾಸುಮ್ಮನೆ ರಾಜಕೀಯ ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ. ಆಡಳಿತ ಪಕ್ಷದ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದ ಅಭಿವೃದ್ಧಿಯತ್ತ ಹಾಗೂ ಬರ ಪರಿಹಾರ ಕಾಮಗಾರಿಗಳ ಕಡೆ ಗಮನ ನೀಡಿದರೆ ನಾವು ಕೂಡ ಬೆಂಬಲ ನೀಡುತ್ತೇವೆ ಎಂದು ಭರವಸೆ ನೀಡಿದರು.
ಮೈತ್ರಿ ಪಕ್ಷಗಳಲ್ಲಿ 15- 20 ಶಾಸಕರು ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಅವರನ್ನು ಸಮಾಧಾನಪಡಿಸಿ ವಿಶ್ವಾಸಕ್ಕೆ ತೆಗೆದುಕೊಂಡು ಗೊಂದಲವನ್ನು ಪರಿಹರಿಸಿಕೊಳ್ಳಬೇಕು. ಅವರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು. ಅದನ್ನು ಬಿಟ್ಟು ನಮ್ಮ ವಿರುದ್ಧ ಆರೋಪ ಮಾಡುತ್ತಾ ಕೂರುವುದಲ್ಲ ಸಮಂಜಸವಲ್ಲ. ನಾವು ಪ್ರತಿಪಕ್ಷವಾಗಿ ನಮ್ಮ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.