ನವದೆಹಲಿ, ಜೂ21(Daijiworld News/SS): ರಾಜ್ಯದಲ್ಲಿ ಮೈತ್ರಿ ಸರ್ಕಾರ ಬಿದ್ದರೆ ಅದಕ್ಕೆ ಬಿಜೆಪಿ ಕಾರಣವಲ್ಲ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಹೇಳಿದ್ದಾರೆ.
ಎಚ್.ಡಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಹಿರಿಯ ರಾಜಕಾರಣಿಯಾಗಿದ್ದಾರೆ. ಅವರು ಸತ್ಯವನ್ನೇ ಹೇಳಿದ್ದಾರೆ. ಮಧ್ಯಂತರ ಚುನಾವಣೆ ನಡೆಯುವುದರಲ್ಲಿ ಸಂಶಯವೇ ಇಲ್ಲ. ಈ ಕುರಿತು ದೊಡ್ಡ ಪಕ್ಷವಾದ ಬಿಜೆಪಿ ನಿರ್ಧಾರ ತೆಗೆದುಕೊಳ್ಳಬೇಕಿದೆ. ಮಧ್ಯಂತರ ಚುನಾವಣೆಯನ್ನು ಜನರು ಒಪ್ಪಿಕೊಳ್ಳುವುದಿಲ್ಲ. ಸರ್ಕಾರ ಬೀಳುವುದು ಖಚಿತ. ಆದರೆ ಮಧ್ಯಂತರ ಚುನಾವಣೆ ನಡೆಯುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ನಾಯಕರ ಆಂತರಿಕ ಕಿತ್ತಾಟಗಳು ಹೆಚ್ಚಾಗಿವೆ. ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡರೆ ಅದು ಯಾರಿಂದ ಅನ್ನುವುದು ಎಲ್ಲರಿಗೂ ಗೊತ್ತು. ಮಗನನ್ನು ಸಿಎಂ ಮಾಡುವ ಮತ್ತು ಅಧಿಕಾರದ ಆಸೆಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತದೆ ಎಂಬುದು ನನಗೆ ಗೊತ್ತಿಲ್ಲ. ಕಳೆದ ಎರಡು ತಿಂಗಳುಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಅನಿವಾರ್ಯ ಎನ್ನಿಸುತ್ತಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಹೇಳಿಕೆ ನೀಡಿದ್ದರು.