ನವದೆಹಲಿ, ಜೂ23(Daijiworld News/SS): ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಸರ್ಕಾರದಿಂದಲೇ ಭರಿಸುವ ಹೊಸ ಯೋಜನೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಮಾತನಾಡಿ, ಮುಂದಿನ ದಿನಗಳಲ್ಲಿ 1ರಿಂದ 12ನೇ ತರಗತಿವರೆಗಿನ ಸರ್ಕಾರಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.
ನೀಟ್, ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಯನ್ನು ರಾಜ್ಯ ಸರ್ಕಾರದಿಂದಲೇ ನೀಡಲಾಗುತ್ತಿದೆ. ಶೇ.80ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು 2,500 ರೂಗೆ ಏರಿಸಲಾಗಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಬಳಿಕ ಕಂಗೆಟ್ಟಿರುವ ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷ ಉಚಿತ ಯೋಜನೆ ಸರಣಿಯನ್ನೇ ಆರಂಭಿಸುವಂತಿದೆ. ಈ ಬಾರಿ ಯುವಜನತೆಯನ್ನು ಗುರಿಯಾಗಿಸಿಕೊಂಡು, ಹೊಸ ಯೋಜನೆಗಳಿಗೆ ಕೈ ಹಾಕಲಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.