ಬೆಂಗಳೂರು, ಜು. 04 (DaijiworldNews/AK):ಸರ್ಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಿಕ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಎಫ್ಐಆರ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಜುಲೈ 8ರ ವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ಹೊರಡಿಸಿದೆ.
ಅಲ್ಲದೇ ತನಿಖೆಗೆ ಸಹಕರಿಸಲು ರವಿಕುಮಾರ್ ಗೆ ಕೋರ್ಟ್ ಖಡಕ್ ಸೂಚನೆಯನ್ನು ಸಹ ನೀಡಿದೆ. ರಾಜಕಾರಣಿಗಳು ಬಳಸುವ ಭಾಷೆ ಕೆಳಮಟ್ಟಕ್ಕಿಳಿದಿದೆ ಎಂದು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿ ಮುಂದಿನ ವಿಚಾರಣೆಯನ್ನು ಜುಲೈ 8ಕ್ಕೆ ಮುಂದೂಡಿದರು.
ಇನ್ನೊಂದೆಡೆ ರವಿಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮದ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ಪ್ರಕರಣ ಸಂಬಂಧ ರವಿಕುಮಾರ್ ಅವರು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ರವಿಕುಮಾರ್ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.