ಬೆಂಗಳೂರು, ಜು. 11 (DaijiworldNews/AK):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಪ್ರಕರಣ 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಲಾದ ಜಾಹೀರಾತಿಗೆ ಸಂಬಂಧಿಸಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹಿರಾತು ನೀಡಿತ್ತು.
ಪಕ್ಷದ ಗೌರವಕ್ಕೆ ದಕ್ಕೆ ತರುವ ರೀತಿಯಲ್ಲಿ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಈ ಪ್ರಕರಣ ರದ್ದತಿ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.