ಬೆಂಗಳೂರು,ಜೂ24(DaijiworldNews/AZM):ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ 'ಗ್ರಾಮ ವಾಸ್ತವ್ಯ-ಶೂನ್ಯ ಸಾಧನೆ' ಎಂಬ ಪುಸ್ತಕ ಬಿಡುಗಡೆ ಮಾಡಿ, ಆರೋಪ ಮಾಡಿರುವುದಕ್ಕೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬಿಜೆಪಿಯ ಈ ಆರೋಪ ಕೀಳು ಅಭಿರುಚಿಯಿಂದ ಕೂಡಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ, ಬಿಎಸ್ ಯಡಿಯೂರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ಆರೋಗ್ಯಕರವಾಗಿಲ್ಲ. ಅದರಲ್ಲೂ ವೈಯಕ್ತಿಕ ವಿಷಯಗಳ ಬಗ್ಗೆ ಮಾಡಿರುವ ಪ್ರಸ್ತಾಪಗಳು ಸೂಕ್ತವಲ್ಲ ಎಂದಿದ್ದಾರೆ. ಅಲ್ಲದೆ, ಯಡಿಯೂರಪ್ಪ ಅವರ ಎಲ್ಲಾ ಆರೋಪಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ.
ಹಿಂದೆ ಗ್ರಾಮ ವಾಸ್ತವ್ಯ ಮಾಡಿದ ಹಳ್ಳಿಗಳ ಅಭಿವೃದ್ಧಿ ಕುರಿತು ಯಡಿಯೂರಪ್ಪನವರು ಕಿರುಹೊತ್ತಗೆಯನ್ನು ಬಿಡುಗಡೆ ಮಾಡಿದ್ದಾರೆ. ನಾನು ಇದಕ್ಕೆ ಮುಂಚಿತವಾಗಿಯೇ ಈ ಗ್ರಾಮಗಳ ಸ್ಥಿತಿಗತಿಯ ಬಗ್ಗೆ ಮಾಹಿತಿ ತರಿಸಿಕೊಂಡಿದ್ದೇನೆ. ನಾನು ಅಧಿಕಾರದಲ್ಲಿದ್ದ 20 ತಿಂಗಳ ಅವಧಿಯಲ್ಲಿ 47 ಗ್ರಾಮಗಳಲ್ಲಿ ವಾಸ್ತವ್ಯ ಮಾಡಿದ್ದೇನೆ. ಈ ಗ್ರಾಮಗಳಲ್ಲಿ ಮಾಡಲಾಗಿರುವ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿಯನ್ನೂ ಲಗತ್ತಿಸಿದ್ದೇನೆ ಎಂದರು.
ನನ್ನ ಗ್ರಾಮ ವಾಸ್ತವ್ಯದ ಪರಿಕಲ್ಪನೆ ಕೇವಲ ಆ ಗ್ರಾಮದ ಅಭಿವೃದ್ಧಿ ಮಾತ್ರವಲ್ಲ. ಸ್ಥಳೀಯವಾಗಿ ಜನರ ವೈಯಕ್ತಿಕ ಸಮಸ್ಯೆಗಳಿಗೂ, ಸ್ಥಳದಲ್ಲಿಯೇ ಪರಿಹಾರ ದೊರಕಿಸುವುದು, ಜನರ ಆಶಯಗಳನ್ನು ಅರ್ಥೈಸಿಕೊಂಡು ಯೋಜನೆಗಳನ್ನು ರೂಪಿಸುವುದು, ಜನರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ದೊರಕಿಸಲು ಇರುವ ತೊಡಕುಗಳನ್ನು ನಿವಾರಿಸುವುದು ಗ್ರಾಮ ವಾಸ್ತವ್ಯದಿಂದ ಸಾಧ್ಯ ಎಂದು ತಿಳಿಸಿದರು.
ರೈತರ ಸಾಲ ಮನ್ನಾ, ಸಾರಾಯಿ ನಿಷೇಧ, ಲಾಟರಿ ನಿಷೇಧ, ಸುವರ್ಣ ಗ್ರಾಮ ಯೋಜನೆ, ಸಾವಿರಕ್ಕೂ ಹೆಚ್ಚು ಶಾಲಾ ಕಾಲೇಜುಗಳ ಸ್ಥಾಪನೆ, 40 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕ ಮೊದಲಾದ ಉಪಕ್ರಮಗಳಿಗೆ ಪ್ರೇರಣೆ ನನ್ನ ಗ್ರಾಮ ವಾಸ್ತವ್ಯದ ಅನುಭವಗಳು. ನಾನು ತಂಗಿದ ಗ್ರಾಮಗಳಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಸಾಧ್ಯವಾಗಿದೆ. ಆದರೆ ನಂತರದ ದಿನಗಳಲ್ಲಿ ಸನ್ಮಾನ್ಯ ಯಡಿಯೂರಪ್ಪನವರು ಮುಖ್ಯಮಂತ್ರಿ ಆದಾಗ ಈ ಗ್ರಾಮಗಳಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆಂಬ ಮಾಹಿತಿ ನೀಡಲಿ ಎಂದು ತಿಳಿಸಿದರು.
ಗ್ರಾಮ ವಾಸ್ತವ್ಯ ವ್ಯರ್ಥ, ಅದಕ್ಕೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಆರೋಪ ಮಾಡಲಾಗುತ್ತಿದೆ. ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಪ್ರಯಾಣ ವೆಚ್ಚ, ಶಾಲೆಯಲ್ಲಿ ಉಳಿದುಕೊಳ್ಳಲು ಕನಿಷ್ಠ ಸೌಲಭ್ಯ ಮಾತ್ರ ನನ್ನ ವೆಚ್ಚ. ಇದೇ ಸಂದರ್ಭ ಬಳಸಿ, ವಿವಿಧ ಇಲಾಖೆಗಳು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ/ ಉದ್ಘಾಟನೆ ಮಾಡಿದ್ದಲ್ಲಿ, ಅವುಗಳು ಗ್ರಾಮ ವಾಸ್ತವ್ಯದ ವೆಚ್ಚದ ವ್ಯಾಪ್ತಿಗೆ ಬರುವುದಿಲ್ಲ ಎಂದರು.
ಯಾದಗಿರಿ ಜಿಲ್ಲೆಯ ಚಂಡರಕಿ ಗ್ರಾಮದಲ್ಲಿ 58 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಆದರೆ ವಾಸ್ತವತೆಯನ್ನು ತಿಳಿದುಕೊಂಡು ಜವಾಬ್ದಾರಿಯುತ ಸ್ಥಾನದಲ್ಲಿರುವ ಯಡಿಯೂರಪ್ಪನವರು ಮಾತನಾಡಬೇಕೆಂದು ನಾನು ಆಶಿಸುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.