ಮುಂಬೈ, ಜು. 21 (DaijiworldNews/AA): 2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಕೆಳಹಂತದ ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿದ್ದ ಎಲ್ಲಾ 12 ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ.

ಮುಂಬೈ ರೈಲು ಸ್ಫೋಟದಲ್ಲಿ 189 ಮಂದಿ ಸಾವನ್ನಪ್ಪಿ, 800 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 19 ವರ್ಷಗಳ ಬಳಿಕ ಬಾಂಬೆ ಹೈಕೋರ್ಟ್, ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕೆಳ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಎಲ್ಲಾ 12 ಆರೋಪಿಗಳನ್ನು ಖುಲಾಸೆಗೊಳಿಸಿದೆ. 2015ರಲ್ಲಿ ವಿಚಾರಣಾ ನ್ಯಾಯಾಲಯವು ಈ 12 ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ, ಅವರಲ್ಲಿ ಐವರಿಗೆ ಮರಣದಂಡನೆ ಮತ್ತು ಉಳಿದವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ವಿಚಾರಣಾ ನ್ಯಾಯಾಲಯದ ಆದೇಶವನ್ನು ಬದಿಗಿಟ್ಟು, ನ್ಯಾ. ಅನಿಲ್ ಕಿಲೋರ್ ಮತ್ತು ನ್ಯಾ. ಶ್ಯಾಮ್ ಚಂದಕ್ ಅವರಿದ್ದ ಹೈಕೋರ್ಟ್ ಪೀಠ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಸಂಪೂರ್ಣವಾಗಿ ವಿಫಲವಾಗಿದೆ ಆರೋಪಿಗಳು ಅಪರಾಧ ಮಾಡಿದ್ದಾರೆ ಎಂದು ನಂಬುವುದು ಕಷ್ಟ. ಆದ್ದರಿಂದ, ಅವರ ಅಪರಾಧವನ್ನು ರದ್ದುಗೊಳಿಸಲಾಗಿದೆ. ಆರೋಪಿಗಳು ಬೇರೆ ಯಾವುದೇ ಪ್ರಕರಣದಲ್ಲಿ ಅಗತ್ಯವಿಲ್ಲದಿದ್ದರೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಬಹುದು ಎಂದು ತಿಳಿಸಿದೆ.
ಪ್ರಕರಣದ ತನಿಖೆಯ ಸಮಯದಲ್ಲಿ ವಶಪಡಿಸಿಕೊಂಡ ಸ್ಫೋಟಕಗಳು, ಶಸ್ತ್ರಾಸ್ತ್ರಗಳು ಮತ್ತು ನಕ್ಷೆಗಳು ಸ್ಫೋಟಗಳಿಗೆ ಸಂಬಂಧಿಸಿಲ್ಲ. ಸ್ಫೋಟಗಳಲ್ಲಿ ಯಾವ ರೀತಿಯ ಬಾಂಬ್ಗಳನ್ನು ಬಳಸಲಾಗಿದೆ ಎಂಬುದನ್ನು ಪ್ರಾಸಿಕ್ಯೂಷನ್ ಸಾಬೀತುಪಡಿಸಲು ಸಾಧ್ಯವಾಗಲಿಲ್ಲ ಎಂದು ನ್ಯಾಯಾಲಯ ಹೇಳಿದೆ.