ಮೈಸೂರು, ಜೂ25(Daijiworld News/SS): ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಕನಸು ಕಾಣುತ್ತಿದ್ದಾರೆ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಕನಸು ಕಾಣುತ್ತಿದ್ದಾರೆ. ಆದರೆ, ಅವರ ಕನಸಿಗೆ ಯಾರೊಬ್ಬರು ಪ್ರತಿಕ್ರಿಯಿಸುತ್ತಿಲ್ಲ. ಯಡಿಯೂರಪ್ಪ ಹೇಳುವುದು ಯಾವುದೂ ಕೂಡಾ ಸತ್ಯವಾಗಿಲ್ಲ ಎಂದು ಹೇಳಿದರು.
ಹಳೆಯ, ಹಿರಿಯ, ಹೊಸ, ಯುವ ನಾಯಕರನ್ನೊಳಗೊಂಡ ಹೊಸ ಪದಾಧಿಕಾರಿಗಳನ್ನು ನೇಮಿಸಿಕೊಳ್ಳುವ ಮೂಲಕ ಪಕ್ಷ ಸಂಘಟಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ವಜಾಗೊಳಿಸಲಾಗಿದೆ ಎಂದು ಹೇಳಿದರು.
ಮಧ್ಯಂತರ ಚುನಾವಣೆ ಎದುರಾಗುವ ಸಾಧ್ಯತೆ ಇದೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಎಚ್ಚರಿಕೆಯ ಸಂದೇಶಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವ ಸಾಧ್ಯತೆ ಇಲ್ಲ. ಅಂತಹ ಯಾವುದೇ ಚುನಾವಣೆ ರಾಜ್ಯದಲ್ಲಿ ಎದುರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಮ್ಮಿಶ್ರ ಸರ್ಕಾರದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತಂತೆ ಜೂ.22ರಂದು ಪ್ರತಿಕ್ರಿಯಿಸಿದ್ದ ದೇವೇಗೌಡ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ ಬಗ್ಗೆ ಮಾತನಾಡಿದ್ದರು. ಆದರೆ, ನಂತರ ನಗರಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈ ರೀತಿ ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದರು.