ಬೆಂಗಳೂರು, ಜೂ25(Daijiworld News/SS): ಪ್ರಜಾತಂತ್ರವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ದೇಶವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಬೇಕಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಪರಿಸ್ಥಿತಿಯನ್ನು ನೋಡಿದರೆ ಕಾಂಗ್ರೆಸ್ ಮುಕ್ತ ಭಾರತ ಆಗುವುದು ಬಹತೇಕ ನನಸಾಗಲಿದೆ. ಆರ್ಥಿಕ ಹಾಗೂ ಅನಿವಾರ್ಯ ಪರಿಸ್ಥಿತಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಬೇಕಿತ್ತು. ಆದರೆ ಕಾಂಗ್ರೆಸ್ ವೈಯಕ್ತಿಕ ಹಿತಾಸಕ್ತಿಗಾಗಿ, ರಾಜಕೀಯ ವಿರೋಧಿಗಳನ್ನು ಮಟ್ಟಹಾಕಲು ಕಾನೂನು ದುರುಪಯೋಗ ಮಾಡಿಕೊಂಡು ತುರ್ತುಪರಿಸ್ಥಿತಿ ಹೇರಿತು ಎಂದು ಆರೋಪಿಸಿದ್ದಾರೆ.
ಪ್ರಜಾತಂತ್ರ ಮೌಲ್ಯಗಳನ್ನು ಎತ್ತಿ ಹಿಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜನ ಬೆಂಬಲಿಸಿದ್ದಾರೆ. ಪ್ರಜಾತಂತ್ರವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ದೇಶವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಬೇಕಿದೆ ಎಂದು ಹೇಳಿದರು.
ಸರ್ವಾಧಿಕಾರಿ ಮನೋಭಾವದ ಇಂದಿರಾಗಾಂಧಿ ಇಡೀ ದೇಶವನ್ನು ಜೈಲಾಗಿ ಪರಿವರ್ತಿಸಿದರು. ಅಟಲ್ ಬಿಹಾರಿ ವಾಜಪೇಯಿ, ಜಯಪ್ರಕಾಶ್ ನಾರಾಯಣ್ ಸೇರಿದಂತೆ ಸಾವಿರಾರು ನಾಯಕರನ್ನು ಬಂಧಿಸಿ ಜೈಲಿಗೆ ಹಾಕಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯಂತಹ ಸಂಘಟನೆ ಇಲ್ಲದಿದ್ದರೆ ದೇಶದ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತಿತ್ತು. ಪೊಲೀಸರ ಕಿರುಕುಳವನ್ನು ಅನುಭವಿಸಿದ ಕಷ್ಟ ಶಬ್ದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದು ಹೇಳಿದರು.
1975ರ ಜೂನ್ 25ರ ದಿನವನ್ನು ದೇಶ ಎಂದೂ ಮರೆಯಲು ಸಾಧ್ಯವಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟವರು ಯಾವುದನ್ನು ಮರೆಯಬಾರದು. ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ತಲೆ ಎತ್ತದಂತೆ ಮಾಡಬೇಕು. 44 ವರ್ಷಗಳ ನಂತರ ತುರ್ತು ಪರಿಸ್ಥಿತಿ ಬಗ್ಗೆ ನಮ್ಮ ಯುವಕರಿಗೆ ಅರಿವು ಮೂಡಿಸಬೇಕಿದೆ ಎಂದು ತಿಳಿಸಿದರು.