ರಾಯಚೂರು, ಜೂ26(Daijiworld News/SS): ರಾಯಚೂರಿನ ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ಗ್ರಾಮ ವಾಸ್ತವ್ಯ ಮಾಡುವುದಕ್ಕಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಯಾನ್ ಎಕ್ಸ್ಪ್ರೆಸ್ ರೈಲಿನ ಮೂಲಕ ಮೂಲಕ ರಾಯಚೂರು ನಗರಕ್ಕೆ ಆಗಮಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಜಲಧಾರೆ ಯೋಜನೆಗೆ ಶೀಘ್ರ ಅನುಮೋದನೆ ನೀಡುವುದರ ಮೂಲಕ ಇಡೀ ಜಿಲ್ಲೆಗೆ ನೀರು ಒದಗಿಸಲಾಗುವುದು. ರಾಯಚೂರು ಜಿಲ್ಲೆಯ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ಕುರಿತು ಈಗಾಗಲೇ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಬರಗಾಲಕ್ಕೆ ಸಂಬಂಧಿಸಿದಂತೆ ಹಾಗೂ ಅದರ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಿದ ಮುಖ್ಯಮಂತ್ರಿಗಳು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಿ. ಎಲ್ಲಿಯೂ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಿ ಎಂದು ಡಿಸಿ ಶರತ್ ಹಾಗೂ ಜಿಪಂ ಸಿಇಒ ನಳಿನಿ ಅತುಲ್ ಅವರಿಗೆ ಖಡಕ್ ಆಗಿ ಸೂಚನೆ ನೀಡಿದ್ದಾರೆ.
ಸರ್ಕಾರ ಎರಡೋ ಮೂರೋ ಜಿಲ್ಲೆಗೆ ಮೂಲಸೌಕರ್ಯಗಳನ್ನು ಒದಗಿಸಿದರೆ ಸಾಕಾಗುವುದಿಲ್ಲ. ರಾಜ್ಯದ ಎಲ್ಲಾ ಜಿಲ್ಲೆಗಳ ಅಭಿವೃದ್ಧಿ ಮಾಡಬೇಕು. ನನಗೆ ಐದಾರು ತಿಂಗಳ ಸಮಯ ಬೇಕು ಅಷ್ಟರೊಳಗೆ ಎಲ್ಲಾ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.