ಹೊಸದಿಲ್ಲಿ, ಜೂ26(Daijiworld News/SS): ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಸೋಲಿನ ಜವಾಬ್ದಾರಿ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆದರೆ ಪಕ್ಷದ ಹಿರಿಯ ನಾಯಕರು ರಾಜೀನಾಮೆಯನ್ನು ತಿರಸ್ಕರಿಸುತ್ತಿದ್ದಾರೆ. ಆದರೂ ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡುವ ವಿಚಾರದಿಂದ ಹಿಂದೆ ಸರಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ.
ಈ ಹಿನ್ನಲೆಯಲ್ಲಿ, ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆದು ಪಕ್ಷವನ್ನು ಮುನ್ನಡೆಸಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ರಾಹುಲ್ ಗಾಂಧಿ ಅವರ ನಿವಾಸದ ಎದುರು ಧರಣಿ ನಡೆಸಿದ್ದಾರೆ.
ರಾಹುಲ್ ಗಾಂಧಿ ಜಿಂದಾಬಾದ್, ಸಂಘರ್ಷ್ ಕರೋ, ಹಮ್ ತುಮಾರೆ ಸಾಥ್ ಹೇ ಎಂಬ ಘೋಷಣೆಗಳನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಕೂಗಿದ್ದಾರೆ. ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸಂಸದೀಯ ಸಭೆಯಲ್ಲೂ ಎಲ್ಲಾ ಸಂಸದರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಒತ್ತಾಯಿಸಿದರೂ, ರಾಹುಲ್ ಅವರು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲು ಮುಂದಾಗಿದೆ. ಈ ನಡುವೆ ಸೋಲಿನ ಹೊಣೆಹೊತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.