ಶಿವಮೊಗ್ಗ, ಜೂ27(DaijiworldNews/SS): ದೋಸ್ತಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ಇಲ್ಲ. ದೋಸ್ತಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂದು ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಳೆಯ ಕೊರೆತೆಯಾಗಿರುವುದರಿಂದ ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಮಿತಿ ಮೀರುತ್ತಿದೆ. ಕುಡಿಯುವ ನೀರಿಗೂ ಜನರು ಪರದಾಡುತ್ತಿದ್ದಾರೆ. ಸರ್ಕಾರದಲ್ಲಿ ಮೋಡ ಬಿತ್ತನೆಗೆ ಸಾಕಷ್ಟು ಹಣವಿದೆ. ಈಗಲಾದರೂ ಮುಖ್ಯಮಂತ್ರಿಗಳು ಮೋಡ ಬಿತ್ತನೆ ಮಾಡಿಸಬೇಕು ಎಂದು ಮನವಿ ಮಾಡಿದ್ದಾರೆ.
ಮೊದಲು ರಾಜ್ಯದಲ್ಲಿ ಪ್ರವಾಸ ಮಾಡಿ ಜನರ ಸಮಸ್ಯೆಗಳನ್ನು ಅರಿಯಬೇಕು. ನಂತರ ಗ್ರಾಮ ವಾಸ್ತವ್ಯ ಮಾಡಬೇಕು. ಗ್ರಾಮ ವಾಸ್ತವ್ಯ ಮಾಡಲು ಇದು ಸೂಕ್ತ ಸಮಯವಲ್ಲ ಎಂದು ಸಲಹೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದ್ದಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು. ಅವರ ಗ್ರಾಮ ವಾಸ್ತವ್ಯಕ್ಕೆ ನಾವು ಅಡ್ಡಿ ಪಡಿಸುತ್ತಿಲ್ಲ. ಗ್ರಾಮದ ಸಮಸ್ಯೆಗಳನ್ನು ಅರಿತು ಬಳಿಕ ಗ್ರಾಮ ವಾಸ್ತವ್ಯ ಮಾಡಲಿ ಎಂದು ಬಿಎಸ್ವೈ ಹೇಳಿದ್ದಾರೆ.