ಬೆಂಗಳೂರು, ಜೂ28(Daijiworld News/SS): ಸರ್ಕಾರ ಸುಭದ್ರವಾಗಿ ಆಡಳಿತ ನೀಡಲಿದ್ದು, ದೇಶದಲ್ಲಿಯೇ ಕರ್ನಾಟಕ ರಾಜ್ಯವನ್ನು ನಂ.1 ಸ್ಥಾನಕ್ಕೆ ಏರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಮೇಲೆ ರಾಜ್ಯದ ಜನರು ನಂಬಿಕೆ ಇಡಬೇಕು. ಸರ್ಕಾರ ಸುಭದ್ರವಾಗಿ ಆಡಳಿತ ನೀಡಲಿದೆ. ಆದರೆ, ಕೆಲವರು ಸರ್ಕಾರ ರಚನೆ ಆದಾಗಿನಿಂದ ಬೀಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಅವರ ಪ್ರಯತ್ನಗಳು ಫಲ ನೀಡುವುದಿಲ್ಲ ಎಂದು ಹೇಳಿದರು.
ಮೈತ್ರಿ ಸರಕಾರವು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ ಹೊಂದಿದ್ದು, ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಎಲ್ಲ ಕೆಳವರ್ಗದ ಜನರಿಗೆ ಸರ್ಕಾರದಿಂದ ರಕ್ಷಣೆ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ನಾನು ಈಗಾಗಲೇ ಎಲ್ಲ ಜಿಲ್ಲೆಗಳಿಗೂ ಸಮಾನ ಅನುದಾನ ಹಂಚಿಕೆ ಮಾಡುತ್ತಿದ್ದರೂ ಕೂಡ ವಿರೋಧ ಪಕ್ಷದವರು 2-3 ಜಿಲ್ಲೆಗಳಿಗೆ ಸೀಮಿತ ಮುಖ್ಯಮಂತ್ರಿ ಎಂದು ಆರೋಪಿಸುತ್ತಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಎಲ್ಲ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ಹೇಳಿದರು.
ವಿರೋಧ ಪಕ್ಷದವರು ತಾರತಮ್ಯದ ಆರೋಪ ಮಾಡುತ್ತಿದ್ದಾರೆ. ನಾನು ಅನುದಾನ ನೀಡುವುದರಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಎಲ್ಲಾ ಜಿಲ್ಲೆಗಳಿಗೂ ಅನುದಾನವನ್ನು ನೀಡಿದ್ದೇನೆ. ಆದರೂ ತಾರತಮ್ಯ ಆರೋಪ ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.