ಬೆಂಗಳೂರು, ಸೆ. 15 (DaijiworldNews/AA): ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ದೇಶದಲ್ಲಿ ವಿವಿಧ ಜಾತಿಧರ್ಮಗಳ ವ್ಯವಸ್ಥೆಯಿದೆ. ಬಹುಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತರಲಾಗಿದೆ. ಜಾತಿವ್ಯವಸ್ಥೆಯಿಂದಾಗಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಜಾರಿಗೊಂಡ ಸಂದರ್ಭದಲ್ಲಿ ವೈರುಧ್ಯತೆಯಿರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದು, ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ ಅಸಮಾನತೆಗಳಿವೆ. ದೇಶದಲ್ಲಿ ಜನರಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸ್ವಾತಂತ್ರ್ಯ ಯಶಸ್ವಿಯಾಗುತ್ತದೆ" ಎಂದು ತಿಳಿಸಿದರು.
"12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಬಸವಣ್ಣನವರು ಪ್ರಜಾಪ್ರಭುತ್ವದ ಪರಿಕಲ್ಪನೆಗೆ ಜೀವ ತುಂಬಿದ್ದರು. ಅತ್ಯಂತ ತಳಸಮುದಾಯದವರಾದ ಅಲ್ಲಮ ಪ್ರಭು ಅವರನ್ನು ಅನುಭವ ಮಂಟಪದ ಅಧ್ಯಕ್ಷರಾಗಿಸಿದ್ದರು. ಇದರಲ್ಲಿ ಮಹಿಳೆಯರೂ ಸೇರಿದಂತೆ ಸಮಾಜದ ಎಲ್ಲ ವರ್ಗದವರೂ ಪ್ರಾತಿನಿಧ್ಯವನ್ನು ಹೊಂದಿದ್ದರು. ಯಾವ ಜಾಗದಲ್ಲಿ ಎಲ್ಲ ವರ್ಗದವರ ಅಭಿಪ್ರಾಯಕ್ಕೆ ಬೆಲೆ ದೊರಕುವುದೇ, ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸ್ಥಾಪಿತವಾಗಿದೆ" ಎಂದರು.
"ಇಂದಿನ ಪ್ರಜಾಪ್ರಭುತ್ವ ದಿನಾಚರಣೆಯ ಘೋಷವಾಕ್ಯ 'ನನ್ನ ಮತ ನನ್ನ ಹಕ್ಕು’ ಈ ಶಕ್ತಿಯನ್ನು ದುರ್ಬಲಗೊಳಿಸುವ ಹುನ್ನಾರ ಪಟ್ಟಭದ್ರ ಹಿತಾಸಕ್ತಿಗಳಿಂದ ನಡೆದಿದೆ. ಶ್ರೀಮಂತರಿಗೆ ಅಧಿಕಾರ ದೊರೆಯುವ ಕಾಲವೊಂದಿತ್ತು. ಆದರೆ ಈಗ ಶ್ರೀಮಂತ, ಬಡವ, ಬಲ್ಲಿದ ಎಂಬ ಬೇಧವಿಲ್ಲದೇ, ಎಲ್ಲರಿಗೂ ಒಂದೇ ಮತದ ಅಧಿಕಾರ ನೀಡಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂದರು. ಆದರೆ ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ. ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯವಾಗುತ್ತದೆ" ಎಂದು ಹೇಳಿದರು.