ಚಾಮರಾಜನಗರ, ನ. 02 (DaijiworldNews/AA): ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಅಕ್ರಮ ಹೋಂಸ್ಟೇ ಅಥವಾ ರೆಸಾರ್ಟ್ ಆಗಲಿ, ಅಕ್ರಮ ಕಲ್ಲು ಗಣಿಗಾರಿಕೆಗಾಗಲೀ ನಮ್ಮ ಸರ್ಕಾರ ಅವಕಾಶ ನೀಡಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ಅರಣ್ಯ ಸಮಸ್ಯೆ ಕುರಿತಂತೆ ರೈತರು ಹಾಗೂ ಸಾರ್ವಜನಿಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ, ಹೋಂಸ್ಟೇ, ರೆಸಾರ್ಟ್ ನಡೆಯುತ್ತಿದ್ದರೆ ಸ್ಪಷ್ಟ ದೂರು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುತ್ತದೆ. ಮಾನವ ವನ್ಯಜೀವಿ ಸಂಘರ್ಷ ಇಂದು ನಿನ್ನೆಯದಲ್ಲ ನೂರಾರು, ಸಾವಿರಾರು ವರ್ಷದಿಂದ ಇದೆ. ಈಗ ವನ್ಯಜೀವಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಇದರಿಂದ ಸಂಘರ್ಷ ಹೆಚ್ಚಳವಾಗುತ್ತಿದ್ದು, ಸ್ಥಳೀಯರ, ಸಾರ್ವಜನಿಕರ, ರೈತರ ಸಲಹೆ, ಅಭಿಪ್ರಾಯ ಪಡೆದು ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಲುವಾಗಿ ಈ ಸಭೆ ನಡೆಸಲಾಗಿದೆ" ಎಂದು ಹೇಳಿದರು.
"ಈಗಾಗಲೇ ಇಲಾಖೆಯ ವತಿಯಿಂದ 2 ತಜ್ಞರ ಸಮಿತಿ ರಚಿಸಲಾಗಿದ್ದು, ವನ್ಯಜೀವಿಗಳು ನಾಡಿಗೆ ಬರುತ್ತಿರುವ ಬಗ್ಗೆ ಅಧ್ಯಯನ ಮಾಡಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಇದರ ಜೊತೆಗೆ ಇಂದಿನ ಸಭೆಯಲ್ಲಿ ರೈತರು, ಸಾರ್ವಜನಿಕರು ನೀಡಿರುವ ಎಲ್ಲ ಸಲಹೆ ಕ್ರೋಡೀಕರಿಸಿ, ಚರ್ಚಿಸಿ ಅನುಷ್ಠಾನಕ್ಕೆ ತರಲಾಗುವುದು" ಎಂದರು.
"ವನ್ಯಜೀವಿಯಿಂದ ಬೆಳೆ ಹಾನಿ, ಜಾನುವಾರಗಳ ಹಾನಿ ಆದಾಗ ಪರಿಹಾರ ಹೆಚ್ಚಿಸಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು. 1972ರಲ್ಲಿ ಬಂಡೀಪುರದಲ್ಲಿ ಕೇವಲ 12 ಹುಲಿಗಳಿದ್ದವು. ಇಂದು 153ಕ್ಕೂ ಹೆಚ್ಚು ಹುಲಿಗಳಿವೆ. ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗಿದೆ. ಹುಲಿಗಳಿಗೆ ಅರಣ್ಯ ಪ್ರದೇಶ ಕಡಿಮೆ ಆಗಿರುವುದರಿಂದ ಸಮಸ್ಯೆ ಉಲ್ಬಣಿಸಲು ಕಾರಣವಾಗಿದೆ" ಎಂದು ವಿವರಿಸಿದರು.