ಬೆಂಗಳೂರು, ಜು 02(Daijiworld News/SM): ರಾಜ್ಯದಲ್ಲಿ ಆಡಳಿತದಲ್ಲಿರುವ ಮೈತ್ರಿ ಸರಕಾರವನ್ನು ಮುಗಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇದರಲ್ಲಿ ಗೃಹ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿಯವರು ನಮ್ಮ ಶಾಸಕರನ್ನು ಸೆಳೆಯುವ ಸಲುವಾಗಿ ಅವರಿಗೆ ಹಣ ಹಾಗೂ ಅಧಿಕಾರದ ಆಮಿಷ ಒಡ್ಡುತ್ತಿದ್ದಾರೆ. ಹೇಗಾದರೂ ಮಾಡಿ ರಾಜ್ಯದ ಮೈತ್ರಿ ಸರಕಾರವನ್ನು ಉರುಳಿಸಬೇಕೆನ್ನುವ ಉದ್ದೇಶವನ್ನು ಬಿಜೆಪಿ ಹಾಗೂ ಕೇಂದ್ರ ಸರಕಾರ ಹೊಂದಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸರಕಾರ ಪತನಗೊಳ್ಳುವ ಬಗ್ಗೆ ಯಾವುದೇ ಆತಂಕವಿಲ್ಲ. ಈಗಾಗಲೇ ರಾಜೀನಾಮೆ ನೀಡಿರುವ ಶಾಸಕರು ಬಿಜೆಪಿಯನ್ನು ಸೇರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ಇಬ್ಬರು ಶಾಸಕರ ರಾಜೀನಾಮೆ ವಿಚಾರದಲ್ಲಿ ಹತ್ತು ಹಲವು ಊಹಾಪೋಹಗಳು ಕೇಳಿಬರುತ್ತಿದ್ದು, ಇದಕ್ಕೆ ಕಿವಿಗೊಡುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.