ತಮಿಳುನಾಡು, ನ. 24 (DaijiworldNews/TA): ತಮಿಳುನಾಡಿನ ತೆಂಕಸಿ ಜಿಲ್ಲೆಯಲ್ಲಿ ಸೋಮವಾರ ಎರಡು ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿ, 28 ಜನರು ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ಮಧುರೈನಿಂದ ಸೆಂಕೊಟ್ಟೈಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ತೆಂಕಸಿಯಿಂದ ಕೋವಿಲ್ಪಟ್ಟಿ ಕಡೆಗೆ ಹೋಗುತ್ತಿದ್ದ ಇನ್ನೊಂದು ಬಸ್ ಡಿಕ್ಕಿ ಹೊಡೆದಿದ್ದು, ಎರಡೂ ವಾಹನಗಳು ಜಖಂಗೊಂಡಿದ್ದು, ಸ್ಥಳೀಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೃಹತ್ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಮಧುರೈನಿಂದ ಸೆಂಕೊಟ್ಟೈಗೆ ಹೋಗುತ್ತಿದ್ದ ಕೀಸರ್ ಬಸ್ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಗೊಂಡ 28 ಪ್ರಯಾಣಿಕರು ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನೇಕರ ಸ್ಥಿತಿ ಗಂಭೀರವಾಗಿದೆ. ಘಟನೆಯ ಬಗ್ಗೆ ಪೊಲೀಸರು ವಿವರವಾದ ತನಿಖೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದಾರೆ.