ಲಖನೌ, ಜು04(Daijiworld News/SS): ಪ್ರಧಾನಮಂತ್ರಿ ಕಾರ್ಯಾಲಯದ ಸೂಚನೆಯಂತೆ ಭ್ರಷ್ಟ ಅಧಿಕಾರಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಸುಮಾರು 600 ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈಗಾಗಲೇ 200 ಮಂದಿಗೆ ಕಡ್ಡಾಯ ನಿವೃತ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. 400 ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಗೆ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾತನಾಡಿರುವ ಉತ್ತರ ಪ್ರದೇಶ ಸರ್ಕಾರದ ವಕ್ತಾರ, ಸಚಿವ ಶ್ರೀಕಾಂತ್ ಶರ್ಮಾ, 600 ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವುದು ಇಡೀ ದೇಶದಲ್ಲೇ ಇದೇ ಮೊದಲು ಎಂದು ಹೇಳಿದ್ದಾರೆ.
ಜೂ.20ರಂದು ಉನ್ನತಾಧಿಕಾರಿಗಳ ಜತೆ ಸಭೆ ನಡೆಸಿದ ಸಿಎಂ ಯೋಗಿ, ಅದಕ್ಷ ಮತ್ತು ಭ್ರಷ್ಟ ಅಧಿಕಾರಿಗಳಿಗೆ ಉಳಿಗಾಲವಿಲ್ಲ ಎಂದು ಎಚ್ಚರಿಸಿದ್ದರು. ಇಂಥ ಅಧಿಕಾರಿಗಳ ಪಟ್ಟಿ ಸಿದ್ಧಪಡಿಸಲು ಸೂಚಿಸಿದ್ದರು ಎಂದು ಶರ್ಮಾ ತಿಳಿಸಿದ್ದಾರೆ.
ಪೊಲೀಸ್ ಇಲಾಖೆಗೂ ಇದೇ ರೀತಿಯ ಸೂಚನೆಯನ್ನು ನೀಡಿದ್ದ ಸಿಎಂ, 50 ವರ್ಷ ಮೇಲ್ಪಟ್ಟ ಅದಕ್ಷ ಮತ್ತು ಭ್ರಷ್ಟ ಅಧಿಕಾರಿಗಳ ಪಟ್ಟಿ ನೀಡುವಂತೆ ನಿರ್ದೇಶನ ನೀಡಿದ್ದರು ಎನ್ನಲಾಗಿದೆ.