ಬೆಂಗಳೂರು, ಜು08(Daijiworld News/SS): ರಾಜ್ಯದಲ್ಲಿನ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ - ಜೆಡಿಎಸ್ ನಾಯಕರು ರಿವರ್ಸ್ ಆಪರೇಷನ್ ಸೇರಿದಂತೆ ಎಲ್ಲಾ ರೀತಿಯ ತಂತ್ರಗಾರಿಕೆ ಬಳಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ತುರ್ತು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ ಎಂದು ರಾಜಕೀಯ ಮೂಲಗಳಿಂದ ತಿಳಿದುಬಂದಿದೆ.
ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನದತ್ತ ಸಾಗಿರುವ ಹಿನ್ನೆಲೆಯಲ್ಲಿ, ಪ್ರತಿಪಕ್ಷ ಬಿಜೆಪಿ ಮುಂದಿನ ನಡೆ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲು ಬಿಜೆಪಿ ನಿರ್ಧರಿಸಿದೆ. ಇಂದು ಸಂಜೆ 5 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದ್ದು, ಎಲ್ಲಾ ಶಾಸಕರು ಸಭೆಗೆ ಹಾಜರಾಗುವಂತೆ ವಿಧಾನ ಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಸುನಿಲ್ ಕುಮಾರ್ ಶಾಸಕರಿಗೆ ಸಂದೇಶ ರವಾನಿಸಿದ್ದಾರೆ.
ಬಿಜೆಪಿ ಶಾಸಕಾಂಗ ಸಭೆ ಬಳಿಕ ಬಿಜೆಪಿಯ 105 ಶಾಸಕರನ್ನು ಯಲಹಂಕದ ರುಮಡಾ ರೆಸಾರ್ಟ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸೂಚಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.