ಬೆಂಗಳೂರು, ಜು08(Daijiworld News/SS): ನಮ್ಮ ಬಳಿ ಯಾರೇ ಬಂದರೂ ಸ್ವಾಗತಿಸುತ್ತೇವೆ. ಈಗಾಗಲೇ ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಬಹುಮತ ಇಲ್ಲ ಎಂದು ಸಾಬೀತಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಕ್ಷಣ ರಾಜೀನಾಮೆ ನೀಡಿ ಮುಂದಿನ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು. ಅವರದೇ ಪಕ್ಷದ ಶಾಸಕರು ಮೈತ್ರಿ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಈ ಸರ್ಕಾರದಲ್ಲಿ ಯಾವುದೇ ಕೆಲಸ ಆಗಲ್ಲ ಅಂತಿದ್ದಾರೆ ಎಂದು ಟೀಕಿಸಿದರು.
ಸಿಎಂ ಕುಮಾರಸ್ವಾಮಿಗೆ ಅಧಿಕಾರದಲ್ಲಿ ಮುಂದುವರಿಯಲು ನೈತಿಕ ಹಕ್ಕಿಲ್ಲ. ಮುಂದಿನ ಸರ್ಕಾರ ರಚಿಸಲು ಸಿಎಂ ಅವಕಾಶ ಮಾಡಿಕೊಡಲಿ ಎಂದು ಒತ್ತಾಯಿಸಿದರು.
ನಮ್ಮ ಬಳಿ ಯಾರೇ ಬಂದರೂ ಸ್ವಾಗತಿಸುತ್ತೇವೆ. ಮಹೇಶ್ ಹಾಗೂ ನಾಗೇಶ್ ಬಿಜೆಪಿಗೆ ಬೆಂಬಲ ಸೂಚಿಸಿರುವುದು ಸ್ವಾಗತಾರ್ಹ ವಿಚಾರವಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಎಲ್ಲಿಯವರೆಗೂ ಮುಂಬೈನಲ್ಲಿ ಇರುತ್ತಾರೋ ಅಲ್ಲಿಯವರೆಗೆ ಅವರನ್ನು ನಾವು ಮಾತನಾಡಿಸುವುದು ಇಲ್ಲ. ಸಂಪರ್ಕಿಸುವುದು ಇಲ್ಲ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಕೋಟಾ ಶ್ರೀನಿವಾಸ್ ಪೂಜಾರಿ, ಸರ್ಕಾರದ ಶಾಸಕರು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ. ಶಾಸಕರಿಗೆ ಮಾನ್ಯತೆ ಸಿಗುತ್ತಿಲ್ಲ ಎಂದು ರಾಜೀನಾಮೆ ಕೊಟ್ಟಿದ್ದಾರೆ. ಶಾಸಕರಿಗೆ ಸಾರಿಗೆ ವ್ಯವಸ್ಥೆಯನ್ನು ಬಿಜೆಪಿ ಮಾಡಿದೆ ಎಂದು ಆರೋಪಿಸುತ್ತಿದ್ದಾರೆ. ಸಾರಿಗೆ ವ್ಯವಸ್ಥೆ ಕೇವಲ ಒಬ್ಬರಿಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲರ ಒಡೆತನದಲ್ಲೂ ಸಾರಿಗೆ ವ್ಯವಸ್ಥೆಗಳಿವೆ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಡಿ ಎಂದು ಹೇಳಿದರು.