ಬೆಂಗಳೂರು, ಜು 08 (DaijiworldNews/SM): ರಾಜ್ಯದ ದೋಸ್ತಿ ಸರಕಾರಕ್ಕೆ ಬೆಂಬಲವಾಗಿದ್ದ ಶಾಸಕರು ರಾಜೀನಾಮೆ ನೀಡುತ್ತಲೇ ಇದ್ದಾರೆ. ಆದರೆ ಈ ಬಗ್ಗೆ ಸಿಎಂ ಕುಮಾರಸ್ವಾಮಿ ಹಗುರವಾಗಿ ತೆಗೆದುಕೊಂಡಿರುವಂತೆ ಕಂಡುಬರುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ನನಗೇನು ಆತಂಕವಿಲ್ಲ ಎಂದು ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಸರ್ಕಾರಕ್ಕೆ ಏನೂ ಸಮಸ್ಯೆ ಇಲ್ಲ. ಹೀಗಿರುವಾಗ ನನಗೆ ಯಾವುದೇ ಚಿಂತೆ ಇಲ್ಲ. ನನಗೆ ನನ್ನ ಜವಾಬ್ದಾರಿ ಮುಖ್ಯವಾಗಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಇನ್ನು ಬಿಜೆಪಿ ಸರಕಾರ ರಚನೆ ಮಾಡಲಿದೆಯಾ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಕುಮಾರಸ್ವಾಮಿ, ಬಿಜೆಪಿಯವರು, ಬೇರೆಯವರು ಏನುಮಾಡುತ್ತಾರೆ ಎಂಬುವುದು ತಿಳಿದಿಲ್ಲ. ನಾನು ನನ್ನ ಕರ್ತವ್ಯ ನಿಭಾಯಿಸುತ್ತೇನೆ ಎಂದರು.
ಈಗಿರುವ ಪರಿಸ್ಥಿತಿಯಲ್ಲಿ ರಾಜ್ಯದ ಜವಾಬ್ದಾರಿ ನಿರ್ವಹಣೆ ಮಾಡುತ್ತಿದ್ದೇನೆ. ರೈತರ ಸಮಸ್ಯೆಗಳ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.