ಬೆಂಗಳೂರು, ಜು 08 (DaijiworldNews/SM): ರಾಜ್ಯದ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದೆ. ಈ ಕಾರಣದಿಂದಾಗಿ ಕೂಡಲೇ ಸಿಎಂ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು, ಸರ್ಕಾರ ತನ್ನ ಬಹುಮತ ಕಳೆದುಕೊಂಡಿದೆ. ಕುಮಾರಸ್ವಾಮಿಯವರಿಗೆ ಸಿಎಂ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಆದ್ದರಿಂದ ಶೀಘ್ರದಲ್ಲೇ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಒತ್ತಾಯಿಸಿದರು.
ಇನ್ನು ನಾವು ಸರಕಾರ ರಚಿಸುವ ಬಗ್ಗೆ ಇಲ್ಲಿಯ ತನಕ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪ್ರಮಾಣ ವಚನಕ್ಕೆ ದಿನಾಂಕ ನಿಗದಿ ಮಾಡುವುದಾಗಲಿ ಮಾಡಿಲ್ಲ. ಎಲ್ಲದಕ್ಕೂ ಕಾಲವೇ ಉತ್ತರ ನೀಡಲಿದೆ ಎಂದರು.
ಇಂದು ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ರಾಜ್ಯ ರಾಜಕಾರಣದ ಬಿರುಸಿನ ಚರ್ಚೆ ನಡೆದಿದೆ. ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.