ಬೆಂಗಳೂರು, ಜು09(Daijiworld News/SS): ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬ ಮಾತಿನ ಮೂಲಕ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದ ಎಲ್ಲಾ ಸಚಿವರಿಂದ ರಾಜೀನಾಮೆ ಪಡೆದಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿರುವ ಅವರು, ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂದು ಟ್ವೀಟ್ ಮಾಡಿದ್ದಾರೆ.
ರಾಜ್ಯದ ಜನರಿಗೆ ಸಚಿವರ ರಾಜೀನಾಮೆಯ ಅಗತ್ಯವಿಲ್ಲ. ಮೈತ್ರಿ ಸರ್ಕಾರದ ನಿಷ್ಕ್ರಿಯ ದುರಾಡಳಿತದಿಂದ ಬೇಸತ್ತಿರುವ ಜನರಿಗೆ ಬೇಕಾಗಿರುವುದು ಕುಮಾರಸ್ವಾಮಿ ಅವರ ರಾಜೀನಾಮೆಯೇ ಹೊರತು ಸಚಿವರ ರಾಜೀನಾಮೆಯಲ್ಲ. ಹೀಗಾಗಿ ಕುಮಾರಸ್ವಾಮಿ ಆದಷ್ಟು ಬೇಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡು ಸರ್ಕಾರದ ಪತನಕ್ಕೆ ದಿನಗಣನೆ ಆರಂಭವಾಗಿರುವ ಸಮಯದಲ್ಲಿ ಸರ್ಕಾರ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದೆ. ರಾಜ್ಯದಲ್ಲಿನ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ - ಜೆಡಿಎಸ್ ನಾಯಕರು ರಿವರ್ಸ್ ಆಪರೇಷನ್ ಸೇರಿದಂತೆ ಎಲ್ಲಾ ರೀತಿಯ ತಂತ್ರಗಾರಿಕೆ ಬಳಸಲು ಮುಂದಾಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರಕಾರದ ಅಳಿವೋ ಉಳಿವೋ ಎಂಬುದು ಇಂದು ಬಹುತೇಕ ಖಾತ್ರಿ ಆಗಲಿದೆ. ಕಾಂಗ್ರೆಸ್- ಜೆಡಿಎಸ್ ನಾಯಕರು ಆಪರೇಷನ್ ಕಮಲಕ್ಕೆ ಒಳಗಾಗದಂತೆ ತಡೆಯುವ ಕೆಲಸಗಳು ರಾಜಕೀಯ ವಲಯದಲ್ಲಿ ನಡೆಯುತ್ತಿದೆ.