ಬೆಂಗಳೂರು, ಜು 09 (DaijiworldNews/SM): ಸದ್ಯ ರಾಜ್ಯ ರಾಜಕೀಯಕ್ಕೆ ಮರ್ಮಾಘಾತ ನೀಡಿರುವ 13 ಮಂದಿ ಶಾಸಕರು ರಾಜೀನಾಮೆ ನೀಡಿ ತೆರಳಿದ್ದಾರೆ. ಆದರೆ, ಈ ಪೈಕಿ ಮಾಜಿ ಸಚಿವ ಶಾಸಕ ರಾಮಲಿಂಗಾ ರೆಡ್ಡಿ ಮನವೊಲಿಸಲು ನಾಯಕರು ಕಸರತ್ತು ಮುಂದುವರೆಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕರ ಭೇಟಿಗೆ ಹಿಂದೇಟು ಹಾಕಿದ್ದು, ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಸಚಿವ ರಾಮಲಿಂಗಾ ರೆಡ್ಡಿಯವರನ್ನು ಮನವೊಲಿಸಲು ಕಾಂಗ್ರೆಸ್ ನ ಪ್ರಮುಖ ನಾಯಕರು ನಿರಂತರ ಪ್ರಯತ್ನ ಮುಂದುವರೆಸಿದ್ದಾರೆ. ಈಗಾಗಲೇ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಆದರೆ ಅನರ್ಹತೆಯ ಪಟ್ಟಿಯಿಂದ ರಾಮಲಿಂಗಾ ರೆಡ್ಡಿ ಅವರನ್ನು ಕೈಬಿಡಲಾಗಿದೆ.
ಇನ್ನು ಈ ನಡುವೆ ಯಾರನ್ನೂ ಭೇಟಿಯಾಗಲು ಬಯಸದ ರಾಮಲಿಂಗಾ ರೆಡ್ಡಿ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈ ನಡುವೆ 'ರಾಮಲಿಂಗಾ ರೆಡ್ಡಿ ಅವರ ತೀರ್ಮಾನಕ್ಕೆ ನಾನು ಬದ್ಧ' ಎಂದು ಜಯನಗರ ಕ್ಷೇತ್ರದ ಶಾಸಕಿ, ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ. ರಾಮಲಿಂಗಾ ರೆಡ್ಡಿ ಅವರು ಬೆಂಗಳೂರಿನಲ್ಲಿಯೇ ಇದ್ದಾರೆ. ಇತರ ಶಾಸಕರ ಜೊತೆ ಮುಂಬೈಗೆ ತೆರಳಿಲ್ಲ. ಮಂಗಳವಾರ ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ನಾನು ಇನ್ನೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ' ಎಂದು ಸ್ಪಷ್ಟಪಡಿಸಿದರು.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, 'ರಾಮಲಿಂಗಾ ರೆಡ್ಡಿ ಅವರು ಪಕ್ಷದ ವಿರುದ್ಧವಾಗಿ ನಡೆದಿಲ್ಲ. ಅವರೊಂದಿಗೆ ಮಾತುಕತೆ ನಡೆಸಲಾಗುತ್ತದೆ' ಎಂದು ಹೇಳಿದರು.