ನವದೆಹಲಿ, ಜು10(Daijiworld News/SS): ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಮೇಲೆ ನಂಬಿಕೆ ಇಲ್ಲದ ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದು ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದರು.
ಕರ್ನಾಟಕದಲ್ಲಿ ಬಿಜೆಪಿಯು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ, ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದು ಅವರ ವೈಯಕ್ತಿಕ ವಿಚಾರ. ಈ ಬೆಳವಣಿಗೆಯ ಹಿಂದೆ ಬಿಜೆಪಿ ಇಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಮೇಲೆ ನಂಬಿಕೆ ಇಲ್ಲದ ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬದಲಾವಣೆಗಳಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದರು.
ಸಮ್ಮಿಶ್ರ ಸರ್ಕಾರದ ಬಗ್ಗೆ ಆ ಪಕ್ಷದ ನಾಯಕರಲ್ಲೇ ವಿಶ್ವಾಸವಿಲ್ಲ. ಆದ್ದರಿಂದ ರಾಜೀನಾಮೆ ನೀಡಿದ್ದಾರೆ. ನಾವು ಹಿಂದೊಮ್ಮೆ ಸರ್ಕಾರವನ್ನು ಕೆಡವಲು ಪ್ರಯತ್ನಿಸಿದ್ದೆವು ನಿಜ. ಆದರೆ ಅದಾದ ಮೇಲೆ ಒಮ್ಮೆಯೂ ಆ ಕೆಲಸಕ್ಕೆ ಕೈ ಹಾಕಿಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿನ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ - ಜೆಡಿಎಸ್ ನಾಯಕರು ರಿವರ್ಸ್ ಆಪರೇಷನ್ ಸೇರಿದಂತೆ ಎಲ್ಲಾ ರೀತಿಯ ತಂತ್ರಗಾರಿಕೆ ಬಳಸಲು ಮುಂದಾಗಿದ್ದಾರೆ. ಕಾಂಗ್ರೆಸ್ - ಜೆಡಿಎಸ್ ನಾಯಕರು ಆಪರೇಷನ್ ಕಮಲಕ್ಕೆ ಒಳಗಾಗದಂತೆ ತಡೆಯುವ ಕೆಲಸಗಳು ರಾಜಕೀಯ ವಲಯದಲ್ಲಿ ನಡೆಯುತ್ತಿದೆ.