ನವದೆಹಲಿ,,ಡಿ. 13 (DaijiworldNews/AK): ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ `ವೋಟ್ ಚೋರಿ’ನಡೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಭಾನುವಾರ (ಡಿ.14) ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ `ವೋಟ್ ಚೋರ್ ಗಡ್ಡಿ ಛೋಡ್ ಮಹಾ ರ್ಯಾಲಿ’ ಆಯೋಜಿಸಿದೆ.

ಈ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿಯಾಗಲಿದ್ದಾರೆ.
ರ್ಯಾಲಿ ಮಧ್ಯಾಹ್ನ 1:30ಗಂಟೆಯಿಂದ ಆರಂಭವಾಗಿ, ಸಂಜೆಯವರೆಗೆ ನಡೆಯಲಿದೆ. ಈ ಹಿನ್ನೆಲೆ ಕಾರ್ಯಕರ್ತರು ರಾಮಲೀಲಾ ಮೈದಾನಕ್ಕೆ ಆಗಮಿಸುತ್ತಿದ್ದಾರೆ. ಕರ್ನಾಟಕದಿಂದ ಸುಮಾರು ನಾಲ್ಕೈದು ಸಾವಿರ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಪಸ್ಥಿತರಿಲಿದ್ದಾರೆ.
ಈ ಬೃಹತ್ ಸಮಾವೇಶಕ್ಕಾಗಿ ದೆಹಲಿ ಪೊಲೀಸ್ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಿದ್ದು, ರಾಮಲೀಲಾ ಮೈದಾನ ಸುತ್ತಮುತ್ತಲಿನ ಸಂಚಾರ ದಟ್ಟಣೆಗೆ ಸಂಬಂಧಿಸಿದಂತೆ ಎಚ್ಚರಿಕೆ ನೀಡಲಾಗಿದೆ.